ADVERTISEMENT

ವೇತನ ಆಯೋಗ ವರದಿ ಜಾರಿಗೆ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 7:13 IST
Last Updated 13 ಜುಲೈ 2024, 7:13 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ 7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ 7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದರು   

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ 7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದರು

ತುಮಕೂರು: ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ ಸಲ್ಲಿಕೆಯಾಗಿರುವ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ ಜಾರಿ ಮಾಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವೇತನ ಆಯೋಗ ವರದಿ ಸಲ್ಲಿಸಿ ನಾಲ್ಕು ತಿಂಗಳು ಕಳೆದಿದೆ. ಸರ್ಕಾರಿ ನೌಕರರ ಸಮ್ಮೇಳನದಲ್ಲಿ ವರದಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ಈವರೆಗೂ ಜಾರಿಗೆ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿ ಮಾಡಬೇಕು. ರಾಜಸ್ಥಾನ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ. ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಪಿಎಸ್ ಜಾರಿ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಕೊಟ್ಟ ಮಾತಿನಂತೆ ನಡೆದುಕೊಂಡು, ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಗೆ ಅನುಮೋದನೆ ನೀಡಿ ಹಿಂದಿನ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದ್ದು, ಈವರೆಗೂ ಜಾರಿಗೊಳಿಸಿಲ್ಲ. ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಡಿತಮಾಡುತ್ತಿದ್ದು, ಇದರಿಂದ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಯೋಜನೆ ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡಲಾಗುತ್ತಿದೆ. ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಎನ್.ನರಸಿಂಹರಾಜು ನೇತೃತ್ವದಲ್ಲಿ ನೌಕರರು ಮನವಿ ಪತ್ರ ಸಲ್ಲಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಟಿ.ಎನ್.ಜಗದೀಶ್, ಖಜಾಂಚಿ ಲಕ್ಷ್ಮಣ್, ವಿವಿಧ ಇಲಾಖೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.