ಗುಬ್ಬಿ: ಜಿಲ್ಲೆ ಪಾಲಿನ ಮರಣ ಶಾಸನವಾಗಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಯೋಜನೆ ಕೈಬಿಡುವಂತೆ ಸೋಮವಾರದಿಂದ ಪ್ರಾರಂಭವಾಗಿರುವ ವಿಧಾನಸಭಾ ಅಧಿವೇಶನದಲ್ಲಿ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಸಚಿವರು ಸರ್ಕಾರದ ಮೇಲೆ ಒತ್ತಡ ಹೇರಬೇಕಿದೆ ಎಂದು ಬಿಜೆಪಿ ಮುಖಂಡ ಎಸ್.ಡಿ ದಿಲೀಪ್ ಕುಮಾರ್ ಆಗ್ರಹಿಸಿದರು.
ಸೋಮವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ನೀರಿನಿಂದಲೇ ಬದುಕು ಕಟ್ಟಿಕೊಂಡಿರುವ ಜಿಲ್ಲೆ ಜನರಿಗೆ ಅನ್ಯಾಯವಾಗದಂತೆ ಜಿಲ್ಲೆಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.
ತಕ್ಷಣವೇ ಗೊರೂರು ಅಣೆಕಟ್ಟಿನಿಂದ ಜಿಲ್ಲೆಯ ಭಾಗಕ್ಕೆ ನೀರನ್ನು ಹರಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಕೆರೆ ಕಟ್ಟೆಗಳನ್ನು ತುಂಬಿಸಿಕೊಂಡು ನೀರಿನ ಬರ ನೀಗಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಳೆದ ಬಾರಿ ತೀವ್ರ ಬರಗಾಲದಿಂದ ಜನರು ಸಂಕಷ್ಟದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸಂಪನ್ಮೂಲ ಸಂಗ್ರಹಿಸಲು ತೆರಿಗೆ ಹೆಚ್ಚಿಸಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ತಿಳಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಲಕ್ಷ್ಮಿರಂಗಯ್ಯ ಹಾಗೂ ಹಲವು ಮುಖಂಡರು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.