ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಸ್ಥಗಿತಗೊಳಿಸಲು ಸರ್ಕಾರದ ಮೇಲೆ ಜಿಲ್ಲೆಯ ಜನಪ್ರತಿನಿಧಿಗಳು ಒತ್ತಡ ತರುವಂತೆ ನಗರದಲ್ಲಿ ಬುಧವಾರ ನಡೆದ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಸಭೆಯಲ್ಲಿ ಒತ್ತಾಯಿಸಲಾಯಿತು.
ಜುಲೈ 4ರಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಕರೆದಿದ್ದು, ಜಿಲ್ಲೆಯ ಶಾಸಕರನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಿಂದ ಜಿಲ್ಲೆಯ ಜನರಿಗೆ ಆಗುವ ಅನ್ಯಾಯದ ಬಗ್ಗೆ ಗಮನ ಸೆಳೆಯಬೇಕು. ಯೋಜನೆ ರದ್ದುಪಡಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು ಆಗ್ರಹಿಸಿದರು.
ಯೋಜನೆಯ ಮೂಲ ಕಾರಣಕರ್ತರಾದ ಡಿ.ಕೆ.ಶಿವಕುಮಾರ್ ನೇತೃತ್ವದ ಸಭೆಯಲ್ಲಿ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಭೆ ಕರೆದು ಚರ್ಚಿಸಬೇಕು. ಜನರಿಗೆ ಆಗುವ ಅನಾಹುತಗಳನ್ನು ಅರಿತು ಯೋಜನೆ ರದ್ದುಪಡಿಸಬೇಕು ಎಂದು ಕೇಳಿಕೊಂಡರು.
ಕುಣಿಗಲ್ ಶಾಸಕ ಡಾ.ರಂಗನಾಥ್ ರೈತರ ಹೋರಾಟದ ಬಗ್ಗೆ ಅಲ್ಲಿನ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ರೈತರನ್ನು ಎತ್ತಿಕಟ್ಟುವ ರಾಜಕಾರಣ ಮಾಡುತ್ತಿದ್ದಾರೆ. ಕುಣಿಗಲ್ ತಾಲ್ಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಪೈಪ್‌ಲೈನ್ ಬದಲಾಗಿ ನಾಲೆ ಮೂಲಕ ತೆಗೆದುಕೊಂಡು ಹೋಗಲಿ. ಅದಕ್ಕೆ ಯಾರ ಅಡ್ಡಿಯೂ ಇಲ್ಲ ಎಂದು ತಿಳಿಸಿದರು.
ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ನಡೆಯುತ್ತಿದ್ದರೂ ಜಿಲ್ಲೆಯ ಸಚಿವರು, ಕಾಂಗ್ರೆಸ್ ಶಾಸಕರು ವಿರೋಧಿಸಿಲ್ಲ. ನೀರಿನ ವಿಚಾರದಲ್ಲಿ ಜಿಲ್ಲೆಗೆ ಅನ್ಯಾಯ ಆಗುವಂತಹ ತೀರ್ಮಾನ ಕೈಗೊಂಡರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು, ಮುಖಂಡರಾದ ದಿಲೀಪ್‍ಕುಮಾರ್, ಎಚ್.ಟಿ.ಭೈರಪ್ಪ, ಪಂಚಾಕ್ಷರಯ್ಯ, ಅಜ್ಜಪ್ಪ, ಕಳ್ಳಿಪಾಳ್ಯ ಲೋಕೇಶ್, ವೆಂಕಟೇಗೌಡ, ಶಂಕರಪ್ಪ, ತಿರುಮಲೇಶ್ ಚೇಳೂರು, ಕೆ.ಪಿ.ಮಹೇಶ್, ಸಾಗರನಹಳ್ಳಿ ವಿಜಯಕುಮಾರ್, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.