ಸಿಎಂ ಸಿದ್ದರಾಮಯ್ಯ
ಪಾವಗಡ: ತಾಲ್ಲೂಕಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿ ಮುಖ್ಯಮಂತ್ರಿಗಳು ತಾಲ್ಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರಾಮಾಂಜಿನಪ್ಪ ಒತ್ತಾಯಿಸಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದ ಬಡ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. 74 ಹುದ್ದೆ ಖಾಲಿ ಇವೆ. ತಾಲ್ಲೂಕಿನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಉನ್ನತ ಶಿಕ್ಷಣಕ್ಕೆ ತುಮಕೂರು, ಬೆಂಗಳೂರು, ಇತರೆಡೆ ಹೋಗಲಾಗದೆ ಶಿಕ್ಷಣ ಮೊಟಕುಗೊಳಿಸಲಾಗುತ್ತಿದೆ. ಹೀಗಾಗಿ ತಾಲ್ಲೂಕಿನಲ್ಲಿ ಪಾಲಿಟೆಕ್ನಿಕ್, ಎಂಜನಿಯರಿಂಗ್, ನರ್ಸಿಂಗ್ ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಬರಪೀಡಿತ ಪ್ರದೇಶವಾಗಿರುವುದರಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವೇಗ ಹೆಚ್ಚಿಸಬೇಕು. ಎತ್ತಿನಹೊಳೆ ಯೋಜನೆಯಲ್ಲಿ ತಾಲ್ಲೂಕಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಎಚ್ ಜಯರಾಮಯ್ಯ, ತಾಲ್ಲೂಕಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಬೇಕು. ಸಮರ್ಪಕ ರಸ್ತೆ, ಸಾರಿಗೆ ಸಂಪರ್ಕ ಕಲ್ಪಿಸಬೇಕು. ದೊಮ್ಮತಮರಿಯಲ್ಲಿ ಪೊಲೀಸ್ ಠಾಣೆ ಆರಂಭಿಸಬೇಕು. ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ನೀಡಬೇಕು. ಬಾಬು ಜಗಜೀವನರಾಮ್ ಭವನ ನಿರ್ಮಾಣ ಮಾಡಿ, ಪಟ್ಟಣದ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಬೈಪಾಸ್ ನಿರ್ಮಿಸಬೇಕು. ನಾಗಲಮಡಿಕೆ, ಶನೈಶ್ಚರ ದೇಗುಲ, ನಿಡಗಲ್ ಪ್ರದೇಶಗಳಿಗೆ ಮೌಲ ಸೌಕರ್ಯ ಕಲ್ಪಿಸಿ ಪ್ರವಾಸೋದ್ಯಮ ಪ್ರದೇಶಗಳೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಅಕ್ಕಮ್ಮ, ಶಾಂತಕುಮಾರಿ, ನಾಗರಾಜು, ತಿಮ್ಮಪ್ಪ, ಸುಂಕಾರ್ಲಕುಂಟೆ ನಾಗರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.