ADVERTISEMENT

ತುಮಕೂರು: ಜಿಲ್ಲೆಯಲ್ಲಿ ಹೆಚ್ಚಿದ ಡೆಂಗಿ ಪ್ರಕರಣ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 5:26 IST
Last Updated 20 ಆಗಸ್ಟ್ 2025, 5:26 IST
ಸೊಳ್ಳೆ
ಸೊಳ್ಳೆ   

ತುಮಕೂರು: ಜಿಲ್ಲೆಯಲ್ಲಿ ಮಳೆ ಬೀಳುತ್ತಿದ್ದು, ಶೀತದ ವಾತಾವರಣ ನಿರ್ಮಾಣವಾಗಿದೆ. ಈ ಸಮಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚುತ್ತಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಧೂಮೀಕರಣ ಮಾಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶಿಸಿದರು.

ನಗರದಲ್ಲಿ ಮಂಗಳವಾರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದರು. ಸಾರ್ವಜನಿಕರು ಸಹ ಮನೆಗಳ ಸುತ್ತಮುತ್ತ ನೀರು ನಿಲುಗಡೆ ಆಗದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜತೆಗೆ ಧೂಮೀಕರಣ ಮಾಡಿ ಸೊಳ್ಳೆ ನಿಯಂತ್ರಿಸುವಂತೆ ತಿಳಿಸಿದರು.

ಸಕಾಲದಲ್ಲಿ ಮಳೆಯಾಗದೆ ರೈತರು ಶೇಂಗಾ ಬದಲಿಗೆ ರಾಗಿ ಬಿತ್ತನೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಯಾವುದೇ ತೊಂದರೆ ಉಂಟಾಗದಂತೆ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಕೃಷಿ ಜಂಟಿ ನಿರ್ದೇಶಕ ರಮೇಶ್ ಅವರಿಗೆ ಸೂಚಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ‘ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ 330 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ 15 ದಿನಕ್ಕೊಮ್ಮೆ ಕ್ಲೋರಿನೇಷನ್ ಹಾಗೂ ಬಯೋಲಾಜಿಕಲ್ ಪರೀಕ್ಷೆ ಮಾಡಬೇಕು’ ಎಂದು ಎಂಜಿನಿಯರುಗಳಿಗೆ ನಿರ್ದೇಶಿಸಿದರು.

ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಪೈಪ್ ಲೈನ್‌ಗೆ ಹಾನಿ ಹಾಗೂ ಬಯೋಲಾಜಿಕಲ್ ಪರೀಕ್ಷೆ ಮಾಡಿರುವ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿ.ಪಂ ಉಪಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.