ತುಮಕೂರು: ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ನಿಯಂತ್ರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಸಮಾಧಾನ ವ್ಯಕ್ತಪಡಿಸಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಇತ್ತೀಚೆಗೆ ಡೆಂಗಿ ಜ್ವರದಿಂದ ಮೃತಪಟ್ಟ ಗುಣಶ್ರೀ ಸಾವಿಗೆ ಯಾರು ಜವಾಬ್ದಾರಿ’ ಎಂದು ಪ್ರಶ್ನಿಸಿದರು. ಯಾವುದೇ ಜನವಸತಿ ಪ್ರದೇಶದಲ್ಲಿ 1ಕ್ಕಿಂತ ಹೆಚ್ಚು ಡೆಂಗಿ ಪ್ರಕರಣ ವರದಿಯಾದರೆ ಅಂತಹ ಪ್ರದೇಶವನ್ನು ‘ಹಾಟ್ ಸ್ಪಾಟ್’ ಎಂದು ಗುರುತಿಸಬೇಕು ಎಂದರು.
ಈಗಾಗಲೇ ಉಪವಿಭಾಗಾಧಿಕಾರಿ, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಡೆಂಗಿ ನಿಯಂತ್ರಣಕ್ಕೆ ಸೂಚಿಸಲಾಗಿದೆ. ಆದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ. ಆರೋಗ್ಯ ಇಲಾಖೆಯೊಂದಿಗೆ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ನಿರ್ದೇಶಿಸಿದರು.
ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಇದರಲ್ಲಿ ಉದಾಸೀನ ತೋರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ. ಸರಿಯಾಗಿ ಕೆಲಸ ಮಾಡದೆ, ಬೇಜವಾಬ್ದಾರಿ ತೋರುವ ಅಧಿಕಾರಿಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಶಾಲೆಗೆ ಗೈರು ಹಾಜರಾದ ಮಕ್ಕಳ ರಕ್ತ ಪರೀಕ್ಷೆಗೆ ಒಳಪಡಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಮನ್ವಯದಿಂದ ತುರ್ತಾಗಿ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ್, ‘ಜಿಲ್ಲೆಯಲ್ಲಿ ಒಂದು ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಪ್ರಸ್ತುತ 123 ಸಕ್ರಿಯ ಡೆಂಗಿ ಪ್ರಕರಣಗಳಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 11, ಖಾಸಗಿ ಆಸ್ಪತ್ರೆಗಳಲ್ಲಿ 6 ಮಂದಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.