ADVERTISEMENT

ದೇವರಾಯನದುರ್ಗ: ವಿಜೃಂಭಣೆಯಿಂದ ನಡೆದ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 11:14 IST
Last Updated 9 ಮಾರ್ಚ್ 2020, 11:14 IST
   

ತುಮಕೂರು: ತಾಲ್ಲೂಕಿನ ದೇವರಾಯನದುರ್ಗದ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸೋಮವಾರ ಸಾವಿರಾರು ಭಕ್ತರ ಜಯಘೋಷದ ನಡುವೆ ವಿಜೃಂಭಣೆಯಿಂದ ನಡೆಯಿತು.

ರಥ ಸಾಗುತ್ತಿದ್ದಂತೆಯೇ ಭಕ್ತರು ಬಾಳೆ ಹಣ್ಣು, ದವನವನ್ನು ರಥಕ್ಕೆ ತೂರಿ ಭಕ್ತಿ ಮೆರೆದರು. ದೇವರಾಯನ ದುರ್ಗ ಸುತ್ತಮುತ್ತ ಭಕ್ತರು ನೂರಾರು ಕೊಪ್ಪಲುಗಳನ್ನು ಹಾಕಿದ್ದರು. ತುಮಕೂರು ಜಿಲ್ಲೆ ಮಾತ್ರವಲ್ಲದೇ ರಾಜ್ಯದ ನಾನಾ ಭಾಗಗಳಿಂದ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ, ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.

ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಕುಡಿಯುವ ನೀರು, ಶೌಚಾಲಯ, ತಾತ್ಕಾಲಿಕ ವಾಹನ ನಿಲ್ದಾಣ, ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿತ್ತು. ರಥೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ವಾಹನ ನಿಲುಗಡೆಗೆ ತಾತ್ಕಾಲಿಕವಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್, ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ ವಿವಿಧ ಅಧಿಕಾರಿಗಳು, ರಾಜಕೀಯ ಮುಖಂಡರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.