ADVERTISEMENT

ಪಾಲಿಕೆ ಎಂಜಿನಿಯರ್, ವ್ಯವಸ್ಥಾಪಕ ವರ್ಗಾವಣೆ

ಚುನಾವಣೆಯಲ್ಲಿ ಅಕ್ರಮ ನಡೆಸುವ ಸಾಧ್ಯತೆ; ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 6:22 IST
Last Updated 17 ಏಪ್ರಿಲ್ 2024, 6:22 IST

ತುಮಕೂರು: ಮಹಾನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಬಿ.ಕೆ.ಆಶಾ, ಪರಿಸರ ಎಂಜಿನಿಯರ್‌ ಐ.ಬಿ.ನಿಖಿತಾ, ಕಚೇರಿ ವ್ಯವಸ್ಥಾಪಕ ಕೆ.ಎಸ್.ಜಗದೀಶಯ್ಯ ಅವರನ್ನು ಜಿಲ್ಲೆಯಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಮುಖ್ಯ ಚುನಾವಣಾಧಿಕಾರಿ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶಿಸಿದ್ದಾರೆ.

ಈ ಮೂವರು ಅಧಿಕಾರಿಗಳ ವಿರುದ್ಧ ದೂರುಗಳು ಬಂದಿದ್ದು, ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಮುಖ್ಯ ಚುನಾವಣಾ ಅಧಿಕಾರಿ ಸೂಚಿಸಿದ್ದರು. ತನಿಖೆ ನಡೆಸಿ ಜಿಲ್ಲಾಧಿಕಾರಿ ಸಲ್ಲಿಸಿದ ವರದಿಯ ಆಧಾರದ ಮೇಲೆ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ.

ವರ್ಗಾವಣೆಗೆ ನಿರ್ದೇಶಿಸಿರುವ ಅಧಿಕಾರಿಗಳ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಮಗ್ರ ಆರೋಗ್ಯ ತಪಾಸಣೆಯಲ್ಲಿ ನಡೆದಿರುವ ಅಕ್ರಮದಲ್ಲಿ ಬಿ.ಕೆ.ಆಶಾ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು.

ADVERTISEMENT

ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯ ಸಮಯದಲ್ಲಿ ಪುರುಷ ಕಾರ್ಮಿಕರಿಗೂ ಸ್ತನ ಕ್ಯಾನ್ಸರ್‌ ಪರೀಕ್ಷೆ ನಡೆಸಿರುವುದಾಗಿ ಬಿಲ್‌ ಸೃಷ್ಟಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಅಕ್ರಮದ ಕುರಿತು ಪಾಲಿಕೆಯ ಉಪಆಯುಕ್ತ (ಆಡಳಿತ), ಮುಖ್ಯ ಲೆಕ್ಕಾಧಿಕಾರಿ, ಪಾಲಿಕೆ ಆರೋಗ್ಯಾಧಿಕಾರಿ ನೇತೃತ್ವದ ತಂಡ ತನಿಖೆ ನಡೆಸಿ, ಆರೋಗ್ಯ ತಪಾಸಣೆಯಲ್ಲಿ ಅಕ್ರಮ ನಡೆದಿರುವುದನ್ನು ಗುರುತಿಸಿತ್ತು. ತನಿಖಾ ತಂಡ ವರದಿ ನೀಡಿದ ನಂತರವೂ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ.

‘ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ’ ಸಾಮಾಜಿಕ ಕಾರ್ಯಕರ್ತ ಇಮ್ರಾನ್ ಪಾಷ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಲ್ಲಿ 2021ರಲ್ಲಿ ಪೌರ ಕಾರ್ಮಿಕರ ‘ಸಮಗ್ರ ಆರೋಗ್ಯ ತಪಾಸಣೆ’ ನಡೆಸಿದ್ದು, ಅದಕ್ಕಾಗಿ ₹29.6 ಲಕ್ಷ ವೆಚ್ಚ ಮಾಡಲಾಗಿದೆ. ನಗರದ ಶ್ರೀದೇವಿ ಚಾರಿಟಬಲ್ ಟ್ರಸ್ಟ್‌ಗೆ ಇದರ ಜವಾಬ್ದಾರಿ ವಹಿಸಲಾಗಿತ್ತು. 87 ಮಹಿಳಾ ಹಾಗೂ 383 ಪುರುಷ ಪೌರ ಕಾರ್ಮಿಕರು ಸೇರಿ ಒಟ್ಟು 471 ಮಂದಿಗೆ ಆರೋಗ್ಯ ತಪಾಸಣೆ ನಡೆಸಿ ಹಣ ಪಾವತಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಪಾಲಿಕೆಯ ಅಕ್ರಮಗಳ ಕುರಿತು ಸಾಮಾಜಿಕ ಕಾರ್ಯಕರ್ತ ಜಿ.ಮಂಜುನಾಥ್‌ ಎಂಬುವರು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.