ಕುಣಿಗಲ್: ‘ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿದ್ದ ಜೆಡಿಎಸ್‌ನ ಅಪ್ಪ, ಮಗ, ಸೊಸೆ ಮಾಡದ ಕಾರ್ಯವನ್ನು ಈಗ ಅಳಿಯ ಮಾಡುತ್ತಾರಾ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ಸೋಮವಾರ ರಾತ್ರಿ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚನೆ ಮಾಡಿದರು.
‘ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಮತದಾರರು ತೀರ್ಮಾನ ನೀಡುತ್ತಾರೆ. ದೇವೇಗೌಡರು ತಮ್ಮದೆ ಪಕ್ಷದಿಂದ ಅಳಿಯನನ್ನು ಸ್ಪರ್ಧೆಗಿಳಿಸದೆ ಬಿಜೆಪಿಯಿಂದ ಕಣಕ್ಕಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಿಲ್ಲ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು.
‘ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದೆ, ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಗದವರು ಈಗ ಅಧಿಕಾರದಿಂದ ಕೆಳಗಿಳಿಸಿದವರ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಟೀಕೆ ಮಾಡಿದವರಿಗೆ ರಾಜ್ಯದ ಹೆಣ್ಣುಮಕ್ಕಳು ತಕ್ಕ ಉತ್ತರ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ನಿರ್ನಾಮವಾಗಲಿದೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕಾಂಗ್ರೆಸ್ ಬಾಗಿಲು ಸದಾ ತೆರೆದಿರುತ್ತದೆ’ ಎಂದರು.
‘ತಾವಾಗಲಿ, ಸಹೋದರ ಸಂಸದ ಡಿ.ಕೆ.ಸುರೇಶ್ ಆಗಲಿ, ಸಂಬಂಧಿ ಶಾಸಕ ಡಾ.ರಂಗನಾಥ್ ಕಳೆದ ಹತ್ತು ವರ್ಷದಿಂದ ತಾಲ್ಲೂಕಿನ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ನಿರಂತರ ಕಾರ್ಯನಿರ್ವಹಿಸಿ ಅಭಿವೃದ್ಧಿ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ ಎಂದು ತಿಳಿಸಿದರು.
ತಾಲ್ಲೂಕಿನ ಎಸ್.ಪಿ.ಮುದ್ದಹನುಮೇಗೌಡ, ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿ ಸೇರಿ ತಪ್ಪು ಮಾಡಿ ನಂತರ ತಪ್ಪಾಯಿತು ಎಂದು ಕೇಳಿಕೊಂಡ ಮೇರೆಗೆ ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ತುಮಕೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದರು.
ಶಾಸಕ ಡಾ.ರಂಗನಾಥ್, ಚಿತ್ರನಟ ಸಾಧು ಕೋಕಿಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.