ADVERTISEMENT

ಕೌಟುಂಬಿಕ ದೌರ್ಜನ್ಯ: ಇತ್ಯರ್ಥಕ್ಕೆ 60 ದಿನ ಗಡುವು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2023, 6:47 IST
Last Updated 12 ಅಕ್ಟೋಬರ್ 2023, 6:47 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತುಮಕೂರು: ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸೆ ಪ್ರಕರಣಗಳನ್ನು 60 ದಿನಗಳ ಒಳಗೆ ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಬುಧವಾರ ಮಾತನಾಡಿದರು.

ADVERTISEMENT

ಮಹಿಳೆಯರ ಮೇಲೆ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 67 ಹಾಗೂ 2ನೇ ತ್ರೈಮಾಸಿಕದಲ್ಲಿ 79 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಬಾಕಿ ಉಳಿದಿರುವ 87 ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಇನ್ನು ಮುಂದೆ ಮಹಿಳಾ ದೌರ್ಜನ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು 60 ದಿನಗಳ ಒಳಗೆ ಇತ್ಯರ್ಥಪಡಿಸಿ ಸಂತ್ರಸ್ತ ಮಹಿಳೆಯರಿಗೆ ನೆರವಾಗುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕಳೆದ ಏಪ್ರಿಲ್‍ನಿಂದ ಸೆಪ್ಟೆಂಬರ್ ಅಂತ್ಯದವರೆಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಒಟ್ಟು 29 ಪ್ರಕರಣಗಳು ದಾಖಲಾಗಿವೆ. ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು. ಮದುವೆಯಾಗಲಿರುವ ಗಂಡು ಮತ್ತು ಹೆಣ್ಣಿನ ವಯಸ್ಸಿನ ದಾಖಲೆಗಳನ್ನು ಪೋಷಕರಿಂದ ಪಡೆದು ನಿಗದಿಪಡಿಸಿರುವ ವಯೋಮಿತಿ ಪೂರ್ಣಗೊಂಡಿರುವ ಬಗ್ಗೆ ದೃಢಪಡಿಸಿಕೊಳ್ಳುವ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಬೇಕು ಎಂದು ಸೂಚಿಸಿದರು.

ಗಂಡು, ಹೆಣ್ಣಿನ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡ ನಂತರವೇ ದೇವಸ್ಥಾನಗಳಲ್ಲಿ ಮದುವೆಗೆ ಅವಕಾಶ ಕಲ್ಪಿಸುವಂತೆ ಎಲ್ಲ ಪುರೋಹಿತರಿಗೆ ಸುತ್ತೋಲೆ ಹೊರಡಿಸುವಂತೆ ಮುಜರಾಯಿ ತಹಶೀಲ್ದಾರ್ ಸವಿತಾ ಅವರಿಗೆ ನಿರ್ದೇಶಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ‘ಜಿಲ್ಲೆಯಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮೊಬೈಲ್ ಬಳಕೆಯಿಂದಲೂ ವಿದ್ಯಾರ್ಥಿಗಳು ಹಾದಿ ತಪ್ಪುತ್ತಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ನಿಯಮಿತವಾಗಿ ಭೌತಿಕ ತರಗತಿಗಳು ನಡೆಯುತ್ತಿವೆ. ಆದರೆ ಈಗಲೂ ಕೆಲವು ಶಾಲೆಗಳಲ್ಲಿ ಆನ್‍ಲೈನ್ ಮೂಲಕ ಪಠ್ಯಕ್ರಮ ಅಭ್ಯಾಸ ಮಾಡಿಸುತ್ತಿದ್ದಾರೆ. ದ್ವಿತೀಯ ಪಿಯುಸಿ ವರೆಗೆ ಮೊಬೈಲ್ ಬಳಕೆ ಮಾಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು.

ಬಾಲ್ಯ ವಿವಾಹ, ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಿರು ಸಾಕ್ಷ್ಯಚಿತ್ರಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ‘ಜಿಲ್ಲೆಯಲ್ಲಿ ಈವರೆಗೆ 29 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, 21 ವಿವಾಹಗಳನ್ನು ತಡೆಯಲಾಗಿದೆ. ಗುಬ್ಬಿ ತಾಲ್ಲೂಕಿನಲ್ಲಿ 3, ತುಮಕೂರು ನಗರ, ಕೊರಟಗೆರೆ, ಮಧುಗಿರಿ, ಪಾವಗಡ, ಕುಣಿಗಲ್ ತಾಲ್ಲೂಕಿನಲ್ಲಿ ತಲಾ 1 ಸೇರಿದಂತೆ ಒಟ್ಟು 8 ಬಾಲ್ಯ ವಿವಾಹಗಳು ನಡೆದಿವೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸಾಂತ್ವನ ಕೇಂದ್ರಗಳಲ್ಲಿ 710 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 685 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ವರದಕ್ಷಿಣೆ ನಿಷೇಧ ಕಾಯ್ದೆಯಡಿ ವರದಿಯಾದ 70 ಪ್ರಕರಣಗಳಲ್ಲಿ 23 ವಿಲೇವಾರಿ ಮಾಡಿದ್ದು, 47 ಪ್ರಕರಣಗಳು ಬಾಕಿ ಇವೆ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಡಿಎಚ್‍ಒ ಡಾ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.