ತುಮಕೂರು: ನಗರದಲ್ಲಿ ಎರಡು ದಿನಗಳಲ್ಲಿ ಎರಡು ಹತ್ಯೆಗಳಾಗಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಭಾನುವಾರ ಅಂತರಸನಹಳ್ಳಿ ಬಳಿ ಹೆಂಡತಿಯನ್ನು ಗಂಡ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಗೀತಾ (20) ಕೊಲೆಯಾದವರು. ನವೀನ್ (25) ಆರೋಪಿ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗಣನೂರು ಗ್ರಾಮದ ಗೀತಾ ಹಾಗೂ ಕೊರಟಗೆರೆ ತಾಲ್ಲೂಕಿನ ಅಮೃತಗಿರಿಯ ನವೀನ್ ದಂಪತಿಗೆ ಒಂದು ವರ್ಷದ ಗಂಡು ಮಗು ಇದೆ.
ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿದ್ದ ಇಬ್ಬರೂ ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಅಂತರಸನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ನವೀನ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಭಾನುವಾರ ಬೆಳಗಿನ ಜಾವ ಮತ್ತೆ ಗಲಾಟೆಯಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ. ಬೆಳಗ್ಗೆ ಮನೆಯ ಮಾಲೀಕರು ಬಾಡಿಗೆ ಹಣ ಕೇಳಲು ಹೋದಾಗ ಕೊಲೆ ವಿಚಾರ ಗೊತ್ತಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದಾನೆ. ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಬಟವಾಡಿಯಲ್ಲಿ ಶನಿವಾರ ಕೋತಿತೋಪು ನಿವಾಸಿ ನಫೀಸ್ ಅಹ್ಮದ್ (33) ಕೊಲೆಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಹತ್ಯೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.