ಗುಬ್ಬಿ: ‘ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯದ ಜೊತೆಗೆ ಕ್ರೀಡೆಗಳು ಪೂರಕವಾಗುತ್ತವೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಹೇಳಿದರು.
ಸೋಮವಾರ ಪಟ್ಟಣದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಶಾಲಾ ಕ್ರೀಡಾಕೂಟ ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಖುಷಿಯಾಗಿ ಪಾಲ್ಗೊಂಡಿರುವುದು ಹೆಮ್ಮೆಯ ವಿಚಾರ ಎಂದರು.
ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಸಿಗುವ ಕ್ರೀಡಾ ಸವಲತ್ತುಗಳನ್ನು ಬಳಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಸದಸ್ಯ ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಬೇಕು. ಆ ಮೂಲಕ ಶಾಲೆ ಹಾಗೂ ಪೋಷಕರಿಗೆ ಗೌರವ ತರಬೇಕು ಎಂದು
ತಿಳಿಸಿದರು.
ಕ್ರೀಡಾಕೂಟದಲ್ಲಿ ತಾಲ್ಲೂಕಿನ 58 ಶಾಲೆಗಳಿಂದ ಸುಮಾರು1,200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಿವಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಶಿವರಾಮೇಗೌಡ, ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ. ರವೀಶ್, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಕರಿಯಣ್ಣ, ಕಾರ್ಯದರ್ಶಿ ಶಿವಪ್ರಸಾದ್, ದಯಾನಂದ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.