ADVERTISEMENT

ದಲಿತರ ಮೇಲೆ ದೌರ್ಜನ್ಯ; ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ಮೇ 2020, 13:48 IST
Last Updated 29 ಮೇ 2020, 13:48 IST
ತುಮಕೂರು ಪೊಲೀಸ್
ತುಮಕೂರು ಪೊಲೀಸ್    

ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು ಎಂದು ನಗರದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಸಭೆಯಲ್ಲಿ ಆಗ್ರಹಿಸಲಾಯಿತು.

ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ವಿ.ಶಿವಶಂಕರ್, ತುಮಕೂರು ತಾಲ್ಲೂಕು ತಿಮ್ಮನಾಯ್ಕನಹಳ್ಳಿಯಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ, ತುರುವೇಕೆರೆ ತಾಲ್ಲೂಕು ಗಿರಿಯಮ್ಮನಹಳ್ಳಿಯ ಕೆಂಪಯ್ಯ ಅವರ ಹತ್ಯೆಯನ್ನು ಖಂಡಿಸಿದರು. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ತುರುವೇಕೆರೆ ತಾಲ್ಲೂಕಿನ ದೊಡ್ಡಮಾಗೋನಹಳ್ಳಿ, ಮಧುಗಿರಿ ತಾಲ್ಲೂಕು ಮಲ್ಲನಾಯಕನಹಳ್ಳಿಯಲ್ಲಿ ನಡೆದಿರುವ ಜಾತಿ ನಿಂದನೆ, ದೌರ್ಜನ್ಯ ಪ್ರಕರಣಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು.

ADVERTISEMENT

ಜಿಲ್ಲೆಯಲ್ಲಿ ದಲಿತ ಸರ್ಕಾರಿ ಅಧಿಕಾರಿಗಳಿಗೆ ನಿತ್ಯ ಕಿರುಕುಳ ನೀಡಲಾಗುತ್ತಿದೆ. ವರ್ಗಾವಣೆ ಮಾಡಲಾಗುತ್ತಿದೆ. ಇಂತಹ ಸಮಾಜ ವಿರೋಧಿ ಹಾಗೂ ಸಂವಿಧಾನ ವಿರೋಧಿ ನಡೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಮಿತಿ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅಧ್ಯಕ್ಷತೆವಹಿಸಿದ್ದರು. ತುಮಕೂರು ತಾಲ್ಲೂಕು ಸಮಿತಿ ಸಂಚಾಲಕರನ್ನಾಗಿ ಈ ವೇಳೆ ಕೆ.ನರಸಿಂಹಮೂರ್ತಿ ಅವರನ್ನು ನೇಮಕ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.