ADVERTISEMENT

ತುಮಕೂರು | ಡಿವೈಎಸ್‌ಪಿ ಪ್ರಕರಣ: ಇನ್ನೂ ಕ್ರಮ ಇಲ್ಲ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2023, 7:01 IST
Last Updated 13 ಸೆಪ್ಟೆಂಬರ್ 2023, 7:01 IST
ಕೆ.ವಿ.ಅಶೋಕ್
ಕೆ.ವಿ.ಅಶೋಕ್   

ತುಮಕೂರು: ನಗರ ಡಿವೈಎಸ್‌ಪಿ ಶ್ರೀನಿವಾಸ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ನೀಡಿ ಒಂದು ವಾರಕ್ಕೆ ಕಾಲಿಟ್ಟಿದ್ದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ನಗರದ ಹೊರ ವಲಯದ ಯಲ್ಲಾಪುರದ ಬಳಿ ನಡೆದಿದ್ದ ಕೊಲೆ ಪ್ರಕರಣದ ವಿಚಾರಣೆಗಾಗಿ ಮೇ 20ರಂದು ಗ್ರಾಮಾಂತರ ಠಾಣೆಯ ಪೊಲೀಸರು ಮಹಿಳೆಯೊಬ್ಬರನ್ನು ಕರೆದುಕೊಂಡು ಹೋಗಿದ್ದರು. 9 ದಿನಗಳ ಕಾಲ ವಿವಿಧ ಠಾಣೆಗಳಲ್ಲಿ ವಿಚಾರಣೆ ನಡೆಸಿದ್ದರು. ಡಿವೈಎಸ್‌ಪಿ ಶ್ರೀನಿವಾಸ್‌ ಇತರೆ ಪೊಲೀಸರನ್ನು ಠಾಣೆಯಿಂದ ಹೊರಗೆ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ‌ ಎಂದು ಮಹಿಳೆಯೊಬ್ಬರು ಸೆ. 6ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ನೀಡಿದ್ದರು.

ಡಿವೈಎಸ್‌ಪಿ ಶ್ರೀನಿವಾಸ್ ಮೇಲೆ ದೂರು ಬಂದಿದೆ. ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಇಲ್ಲಿ ಮಂಗಳವಾರ ತಿಳಿಸಿದರು.

ADVERTISEMENT

ಪೊಲೀಸರು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ನಿಯಮ ಮೀರಿದ್ದರೆ, ಕಾನೂನು ಉಲ್ಲಂಘಿಸಿರುವುದು ಕಂಡುಬಂದರೆ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಜಮೀನು ವಿವಾದ ಸೇರಿದಂತೆ ಸಿವಿಲ್ ಪ್ರಕರಣಗಳಲ್ಲಿ ಪೊಲೀಸರು ಭಾಗಿಯಾಗಿದ್ದು ಗಮನಕ್ಕೆ ಬಂದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಿಲ್ಲೆಯ 42 ಪೊಲೀಸ್ ಠಾಣೆಗಳಲ್ಲಿ 2,200ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳ ವಿಲೇವಾರಿಗೆ ಗಮನ ಹರಿಸಲಾಗುವುದು. ಅಪರಾಧ, ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲೆಯನ್ನು ಸಮಗ್ರವಾಗಿ ಅಧ್ಯಯನ ಮಾಡಿದ ನಂತರ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಹಿಂದೆ ಏನಾಗಿತ್ತು ಎಂಬುದಕ್ಕಿಂತ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚಿಂತಿಸಲಾಗುವುದು. ಜನರು ಸಹಕಾರ ನೀಡಿದರೆ ಕಾನೂನು, ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಲಿದೆ ಎಂದು ವಿವರಿಸಿದರು.

ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕಾರ್ಯ ಯೋಜನೆ ರೂಪಿಸಲಾಗುವುದು. ವ್ಹೀಲಿಂಗ್ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಮರಿಯಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.