ADVERTISEMENT

ತೆಂಗು ಪಾರ್ಕ್ ನಿರ್ಮಾಣಕ್ಕೆ ಪ್ರಯತ್ನ: ಮಾಧುಸ್ವಾಮಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 4:47 IST
Last Updated 14 ಆಗಸ್ಟ್ 2021, 4:47 IST

ತುಮಕೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಅಮೃತ ಮಹೋತ್ಸವ ಕಾರ್ಯಕ್ರಮಗಳ ಆಯೋಜನೆ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ತುಂಬಿದ್ದು, 75 ವಾರಗಳ ಕಾಲ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು’ ಎಂದು ನಿರ್ದೇಶಿಸಿದರು.

‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆಯಡಿ ಆಯ್ಕೆಯಾಗಿರುವ ತೆಂಗು ಬೆಳೆಯ ಉತ್ಪನ್ನಗಳ ಕುರಿತು ಕಾರ್ಯಾಗಾರ ಆಯೋಜಿಸಬೇಕು. ತೆಂಗುಪಾರ್ಕ್ ನಿರ್ಮಾಣಕ್ಕೆ ತುಮಕೂರು– ಶಿವಮೊಗ್ಗ ಹೆದ್ದಾರಿಯಲ್ಲಿ ಜಾಗ ಗುರುತಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ರಘು ಅವರಿಗೆ ತಿಳಿಸಿದರು.

ADVERTISEMENT

ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯ ಸೌಲಭ್ಯಗಳ ಕುರಿತು ಹಮ್ಮಿಕೊಳ್ಳುವ ಕಾರ್ಯಕ್ರಮ, ಆಚರಣೆಗಳ ಬ್ಯಾನರ್‌ನಲ್ಲಿ ಅಮೃತ ಮಹೋತ್ಸವ ಎಂಬುದನ್ನು ಪ್ರಚುರಪಡಿಸಬೇಕು. ಕೃಷಿ ಇಲಾಖೆಯಿಂದ ಎಣ್ಣೆಕಾಳು ಬೆಳೆ, ತೋಟಗಾರಿಕೆ ಇಲಾಖೆಯಿಂದ ತೆಂಗು ಉತ್ಪನ್ನಗಳ ಬಗ್ಗೆ ಅಮೃತಮಹೋತ್ಸವದ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಎಲ್ಲಾ ತಾಲೂಕುಗಳಲ್ಲೂ ಪ್ರತಿ ತಿಂಗಳು ಆರೋಗ್ಯ ಶಿಬಿರ, ಶಾಲೆಗಳಲ್ಲಿ ಗಿಡ ನೆಡುವುದು, ಮೀನು ಉದ್ಯಮದ ಬಗ್ಗೆ ಕಾರ್ಯಾಗಾರ, ಆಹಾರ ಧಾನ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದರು.

ಅಕ್ರಮ ನಡೆಸದೆ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಮುದಾಯದ ಕಾಮಗಾರಿಗಳಿಗೆ ಆದ್ಯತೆ ಕೊಡಬೇಕು. ಎಣ್ಣೆಕಾಳು ಬೆಳೆ ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಈ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಅರಿವು ಮೂಡಿಸಿ ಪ್ರೋತ್ಸಾಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.