
ತುಮಕೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳದಲ್ಲಿ 1,359 ಮಂದಿಗೆ ಉದ್ಯೋಗ ಲಭ್ಯವಾಗಿದೆ.
ಉದ್ಯೋಗಕ್ಕಾಗಿ ಆನ್‌ಲೈನ್‌ನಲ್ಲಿ 9,259 ಮಂದಿ ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 5,371 ಜನರು ಸಂದರ್ಶನಕ್ಕೆ ಹಾಜರಾಗಿದ್ದರು. ಅಂತಿಮವಾಗಿ 1,359 ಮಂದಿಗೆ ಉದ್ಯೋಗ ಲಭ್ಯವಾಗಿದ್ದು, 1,667 ಜನರನ್ನು ಮುಂದಿನ ಹಂತಕ್ಕೆ ಕಾಯ್ದಿರಿಸಲಾಗಿದೆ. ವಿವಿಧ ವರ್ಗ ಹಾಗೂ ವಲಯದ ಹಲವು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು.
ಜಿಲ್ಲಾ ಆಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ ಮಿಶನ್, ತುಮಕೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಕಳೆದ ವರ್ಷದಿಂದ ಇಂತಹದೊಂದು ಪ್ರಯತ್ನ ಆರಂಭವಾಗಿದ್ದು, ಹಿಂದಿನ ವರ್ಷಕ್ಕಿಂತ ಹೆಚ್ಚು ಮಂದಿ ಉದ್ಯೋಗಕ್ಕಾಗಿ ಈ ಬಾರಿ ನೋಂದಣಿ ಮಾಡಿಕೊಂಡಿದ್ದರು.
ನಗರ ಹಾಗೂ ಜಿಲ್ಲೆಯಷ್ಟೇ ಅಲ್ಲದೆ ಹೊರ ಜಿಲ್ಲೆಯವರೂ ಭಾಗವಹಿಸಿ ಉದ್ಯೋಗ ಪಡೆದುಕೊಂಡಿದ್ದಾರೆ. ಪ್ರತಿ ಕಂಪನಿಗೆ ಪ್ರತ್ಯೇಕವಾಗಿ ಕೌಂಟರ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಡಿಪ್ಲೊಮಾ, ಎಂಜಿನಿಯರಿಂಗ್ ಸೇರಿದಂತೆ ತಾಂತ್ರಿಕ ವಿಭಾಗದವರಿಗೆ ಪ್ರತ್ಯೇಕ ವಿಭಾಗ ತೆರೆಯಲಾಗಿತ್ತು. ಎಸ್‌ಎಸ್‌ಎಲ್‌ಸಿಯಿಂದ ಹಿಡಿದು ಪದವಿ, ಸ್ನಾತಕೋತ್ತರ ಪದವೀದರರು ಉದ್ಯೋಗ ಅರಸಿ ಬಂದಿದ್ದರು.
ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಸಮಯದಲ್ಲಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ, ‘ಕಳೆದ ಬಾರಿ 75 ಕಂಪನಿಗಳು ಭಾಗವಹಿಸಿ, 4 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದರು. ಈ ಸಲ ಇದು ದುಪ್ಪಟ್ಟಾಗಿದೆ’ ಎಂದು ಮಾಹಿತಿ ನೀಡಿದರು.
ಉಪಲೋಕಾಯುಕ್ತ ಬಿ.ವೀರಪ್ಪ ಉದ್ಯೋಗಕ್ಕೆ ಆಯ್ಕೆಯಾದವರಿಗೆ ನೇಮಕಾತಿ ಪತ್ರ ವಿತರಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ, ಕುಲಸಚಿವೆ ನಾಹಿದಾ ಜಮ್ ಜಮ್, ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್, ಪ್ರೊ.ಎಂ.ಕೊಟ್ರೇಶ್, ವಿ.ವಿ ಉದ್ಯೋಗಾಧಿಕಾರಿ ಪ್ರೊ.ಕೆ.ಜಿ.ಪರಶುರಾಮ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.