ADVERTISEMENT

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2019, 15:13 IST
Last Updated 3 ಏಪ್ರಿಲ್ 2019, 15:13 IST

ತುಮಕೂರು: ನಗರದ 6 ಕೇಂದ್ರಗಳಲ್ಲಿ ಏ.10 ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೌಲ್ಯ ಮಾಪನ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5.30 ರವರೆಗೆ ಈ ನಿಷೇಧ ಅನ್ವಯಿಸಲಿದೆ.

ಮೌಲ್ಯ ಮಾಪನ ನಡೆಯುವ ದಿನಾಂಕಗಳಲ್ಲಿ ಕೇಂದ್ರಗಳ ಸುತ್ತಮುತ್ತ ಇರುವ ಜ಼ೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ನಿಷೇಧಿತ ಅವಧಿಯಲ್ಲಿ ಸ್ಟೆನ್ಸಿಲ್ ಯಂತ್ರಗಳನ್ನು ಬಳಸುವಂತಿಲ್ಲ ಹಾಗೂ ಮೌಲ್ಯ ಮಾಪನ ಸಿಬ್ಬಂದಿಗಳನ್ನು ಹೊರತುಪಡಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಡಿಡಿಪಿಐ ಸೂಚನೆ:

ಈ ಬಾರಿ ಮೌಲ್ಯ ಮಾಪನ ಕಾರ್ಯಕ್ಕೆ ಆನ್‌ಲೈನ್ ಮೂಲಕ ಶಿಕ್ಷಕರ ನೋಂದಣಿಯಾಗಿದ್ದು, ಮೌಲ್ಯಮಾಪನ ಕಾರ್ಯಕ್ಕೆ ನೇಮಕಗೊಂಡ ಆದೇಶಗಳು ಪರೀಕ್ಷಾ ಮಂಡಳಿಯ kseeb.kar.nic.in ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.
ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಲಾಗ್‌ಇನ್‌ನಲ್ಲಿ ನೇಮಕಾತಿ ಆದೇಶವನ್ನು ಡೌನ್‌ಲೋಡ್ ಮಾಡಿಕೊಂಡು ಶಿಕ್ಷಕರಿಗೆ ವಿತರಿಸಲು ಸೂಚಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ-28 ಹಾಗೂ 122 ರನ್ವಯ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿಯಮ ತಿದ್ದುಪಡಿ 2012 ರನ್ವಯ ಪ್ರತಿಯೊಬ್ಬ ಶಿಕ್ಷಕರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವುದು ಕಡ್ಡಾಯ. ಮೌಲ್ಯಮಾಪನಕ್ಕೆ ಹಾಜರಾಗದ ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.