ADVERTISEMENT

ಹೆಗ್ಗೆರೆ ಗ್ರಾಮ; 680 ಹಿಂದೂ ಮತದಾರರ ಹೆಸರು ಕೈಬಿಟ್ಟ ಅಧಿಕಾರಿಗಳು

ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ, ಮಾಜಿ ಶಾಸಕ ಬಿ.ಸುರೇಶ್‌ಗೌಡ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 8:57 IST
Last Updated 12 ಏಪ್ರಿಲ್ 2019, 8:57 IST
ಬಿ.ಸುರೇಶ್‌ಗೌಡ
ಬಿ.ಸುರೇಶ್‌ಗೌಡ   

ತುಮಕೂರು: ’ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಬಿಜೆಪಿಗೆ ಮತಹಾಕುವ 680 ಹಿಂದೂ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದು ಮಾಜಿ ಶಾಸಕ ಬಿ.ಸುರೇಶ್‌ಗೌಡ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಚುನಾವಣೆಯಲ್ಲಿ ಗೆಲ್ಲಲು ಮತದಾರರ ಹಕ್ಕು ಕಸಿಯುವ ಕೆಲಸವಾಗಿದೆ. ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದ ಈ ಗ್ರಾಮದಲ್ಲಿಯೇ ವಾಸವಿರುವವರನ್ನು ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ’ ಎಂದು ಹೇಳಿದರು.

‘ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿರುವವರು ಈ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಅಭ್ಯರ್ಥಿ ಮಗನೇ ಮುಖ್ಯಮಂತ್ರಿಯಾಗಿರುವುದರಿಂದ ಆಡಳಿತ ದುರುಪಯೋಗ ನಡೆಯಲಿದೆ. ನ್ಯಾಯ ಸಮ್ಮತ ಚುನಾವಣೆ ನಡೆಯುವ ಬಗ್ಗೆ ನಮಗೆ ಅನುಮಾನ ಇದೆ’ ಎಂದು ತಿಳಿಸಿದರು.

ADVERTISEMENT

‘ಈ ಅನುಮಾನಕ್ಕೆ ಪುಷ್ಠಿ ಎಂಬಂತೆ ತುಮಕೂರು ತಹಶೀಲ್ದಾರ್, ಬೂತ್ ಮಟ್ಟದ ಅಧಿಕಾರಿಗಳು ಜೆಡಿಎಸ್ ಪಕ್ಷದ ಏಜೆಂಟರಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಮತದಾರರ ಪಟ್ಟಿಯಿಂದ ಕೈಬಿಡುವಾಗ ಸಂಬಂಧಪಟ್ಟ ಯಾರಿಗೂ ಮಾಹಿತಿ ನೀಡಿಲ್ಲ. ಚುನಾವಣಾ ಆಯೋಗದ ನಿಯಮಗಳನ್ನು ಅಧಿಕಾರಿಗಳು ಪಾಲಿಸಿಲ್ಲ. ಮತದಾರರ ಪಟ್ಟಿಯಿಂದ ತೆಗೆದು ಹಾಕುವಾಗ ರಾಜಕೀಯ ಪಕ್ಷಗಳ ಗಮನಕ್ಕೂ ತಂದಿಲ್ಲ. ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದಲೇ ಇದೆಲ್ಲಾ ನಡೆದಿದೆ. ಗ್ರಾಮಾಂತರ ಶಾಸಕರ ಅಣತಿಯಿಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಮನವಿ ಮಾಡಲಾಗಿದೆ’ ಎಂದು ಹೇಳಿದರು.

‘ಜಿಲ್ಲಾಧಿಕಾರಿಗೂ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಶಾಸಕರ ಕೈಗೊಂಬೆಯಾಗಿರುವ ತುಮಕೂರು ತಹಶೀಲ್ದಾರ್ ಅವರನ್ನು ತಕ್ಷಣ ಅಮಾನತ್ತು ಮಾಡಬೇಕು. ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಂಗಾಂಜನೇಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೂಳೂರು ಶಿವಕುಮಾರ್, ವೈ.ಎಚ್.ಹುಚ್ಚಯ್ಯ, ಬಿಜೆಪಿ ಮುಖಂಡ ಲಕ್ಷ್ಮೀಶ್, ನಿವೃತ್ತ ಶಿಕ್ಷಕ ಈಶ್ವರಯ್ಯ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.