ತುಮಕೂರು: ‘ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ದೂರು ನೀಡಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕರೆ ಮಾಡಿದ ವ್ಯಕ್ತಿಯು ಲೋಕಾಯುಕ್ತ ಉಪಾಧೀಕ್ಷಕ ಉಮಾಮಹೇಶ್ ಎಂಬ ಹೆಸರಿನಿಂದ ಪರಿಚಯಿಸಿಕೊಂಡು ₹50 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಲ್ಲದಿದ್ದರೆ ಲೋಕಾಯುಕ್ತ ಪೊಲೀಸರು ದಾಳಿ ಮಾಡುತ್ತಾರೆ ಎಂದು ಬೆದರಿಸಿದ್ದಾರೆ. ನನಗೆ 12 ಬಾರಿ, ನನ್ನ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಿಗೆ 5 ಬಾರಿ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ’ ಎಂದು ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇರೆಗೆ 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ), 419 (ವಂಚನೆ) ಸೇರಿದಂತೆ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.