ADVERTISEMENT

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿ: ಪರಮೇಶ್ವರ ಆರೋಪ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 11:14 IST
Last Updated 23 ನವೆಂಬರ್ 2021, 11:14 IST
ಶಾಸಕ ಡಾ.ಜಿ.ಪರಮೇಶ್ವರ
ಶಾಸಕ ಡಾ.ಜಿ.ಪರಮೇಶ್ವರ   

ತುಮಕೂರು: ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್– ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಈ ಬಗ್ಗೆ ನಮಗೆ ಬಲವಾದ ಅನುಮಾನವಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿಯವರಿಗೆ ಬೆಂಬಲ ಸೂಚಿಸುವ ಸಲುವಾಗಿ ಜೆಡಿಎಸ್‌ನವರು 7 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಒಂದು ರೀತಿಯಲ್ಲಿ ಒಳ ಒಪ್ಪಂದಕ್ಕೆ ಒಳಗಾಗಿದ್ದಾರೆ’ ಎಂದು ಹೇಳಿದರು.

ಪರಮೇಶ್ವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ‘ಇಂತಹ ಆರೋಪ ಮಾಡುವುದನ್ನು ನೋಡಿದರೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ನಾಯಕರು ಸೋಲು ಒಪ್ಪಿಕೊಂಡಿದ್ದಾರೆ. ಒಳ ಒಪ್ಪಂದ ಮಾಡಿಕೊಂಡಿದ್ದರೆ ಜೆಡಿಎಸ್‌ನವರು ಏಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದರು? ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಸಮರ್ಥ ಅಭ್ಯರ್ಥಿಗಳು ಸಿಕ್ಕಿಲ್ಲ. ಹಾಗಾಗಿ ಅವರು ನಿಲ್ಲಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘40 ಪರ್ಸೆಂಟ್ ಕಮಿಷನ್ ಸರ್ಕಾರ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಚ್.ಡಿ.ಕುಮಾರಸ್ವಾಮಿ ನಿರುದ್ಯೋಗಿಗಳ ಗುಂಪು. ಪ್ರತಿ ದಿನವೂ ಏನಾದರೂ ಟೀಕೆ ಮಾಡಿಯೇ ಊಟ, ತಿಂಡಿ ಮಾಡುವುದು. ಇವರಿಗೆ ಕೆಲಸ ಇಲ್ಲ, ಟೀಕೆ ಮಾಡುತ್ತಾರೆ. ಪರ್ಸೆಂಟೇಜ್‌ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮೇಲೆ 37 ಪ್ರಕರಣಗಳಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.