ADVERTISEMENT

ಗೌರವಧನ ಬಿಡುಗಡೆ ವಿಳಂಬ ಅತಿಥಿ ಉಪನ್ಯಾಸಕರ ಅಳಲು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 3:44 IST
Last Updated 27 ಅಕ್ಟೋಬರ್ 2020, 3:44 IST

ತುಮಕೂರು: ಅತಿಥಿ ಉಪನ್ಯಾಸಕರಿಗೆ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೂ ಗೌರವಧನ ನೀಡಿಲ್ಲ.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸದನದಲ್ಲಿ ಹೋರಾಟ ನಡೆಸಿದ ಪರಿಣಾಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಳೆದ ಅಧಿವೇಶನದಲ್ಲಿ 5 ತಿಂಗಳ ಗೌರವಧನವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಸರ್ಕಾರ ಕ್ರಮವಹಿಸುತ್ತದೆ ಎಂದು ಭರವಸೆ ನೀಡಿದ್ದರು. ಆದರೆ, ಭರವಸೆ ನೀಡಿ ಒಂದು ತಿಂಗಳು ಕಳೆದರೂ ಗೌರವಧನ ಬಿಡುಗಡೆಯಾಗಿಲ್ಲ. ಅತಿಥಿ ಉಪನ್ಯಾಸಕರ ಬದುಕು ಕಷ್ಟವಾಗಿದೆ ‌ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

ಗೌರವಧನ ಬಿಡುಗಡೆಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ₹ 85 ಕೋಟಿಗೆ ಸರ್ಕಾರ ಅನುಮೋದನೆ ನೀಡಿಲ್ಲ. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ 14,546 ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ನಿತ್ಯದ ಅವಶ್ಯಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ 20 ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹಣಕಾಸಿನ ಕೊರತೆಯಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಡಿಮೆ ಗೌರವಧನಕ್ಕಾಗಿ ದುಡಿಯುತ್ತಿದ್ದ ಅರೆಕಾಲಿಕ, ಅತಿಥಿ ಉಪನ್ಯಾಸಕರ ಬದುಕು
ಹೇಳತೀರದು. ಮುಖ್ಯಮಂತ್ರಿ ಭರವಸೆ ನೀಡಿದಂತೆ ಕೂಡಲೇ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾದ ದಿನದಿಂದಲೇ ಈ ಹಿಂದಿನ ವರ್ಷ ಕರ್ತವ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಕೋರುತ್ತೇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.