ತುಮಕೂರು: ಲೋಕಸಭೆ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ ಕೆಪಿಸಿಸಿ ಪುನರ್ ರಚಿಸಿದ್ದು, ಜಿಲ್ಲೆಯ ಇಬ್ಬರು ನಾಯಕರಿಗೆ ಅವಕಾಶ ಸಿಕ್ಕಿದೆ.
ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ಮುರಳೀಧರ ಹಾಲಪ್ಪ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಆರ್.ರಾಮಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುರಳೀಧರ ಹಾಲಪ್ಪ ಸಾಕಷ್ಟು ಪ್ರಯತ್ನ ನಡೆಸಿದ್ದರು. ಕೊನೆ ಹಂತದಲ್ಲಿ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಸಮಾಧಾನಗೊಂಡಿದ್ದು, ಸ್ವಲ್ಪ ಮಟ್ಟಿಗೆ ಪಕ್ಷದ ಚಟುವಟಿಕೆಗಳಿಂದ ದೂರ ಸರಿಯುತ್ತಿದ್ದರು. ಅವರ ಕೋಪ ಶಮನ ಮಾಡಿ, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡುವ ಸಲುವಾಗಿ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಇದಕ್ಕೂ ಮುನ್ನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವಕ್ತಾರರಾಗಿ ಹಾಲಪ್ಪ ಕೆಲಸ ಮಾಡಿದ್ದರು. ಈಗ ಉಪಾಧ್ಯಕ್ಷ ಸ್ಥಾನಕ್ಕೆ ಭಡ್ತಿ ನೀಡಲಾಗಿದೆ.
ಆರು ವರ್ಷಗಳ ಕಾಲ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆರ್.ರಾಮಕೃಷ್ಣ ಪಕ್ಷವನ್ನು ಮುನ್ನಡೆಸಿದ್ದರು. 2022 ನವೆಂಬರ್‌ನಲ್ಲಿ ಹೊಸ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆ ನಂತರ ಪಕ್ಷದಲ್ಲಿ ಯಾವುದೇ ಅಧಿಕಾರ ಸಿಕ್ಕಿರಲಿಲ್ಲ. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.