
ತುಮಕೂರು: ಹನುಮದ್ ವ್ರತದ ಪ್ರಯುಕ್ತ ಮಂಗಳವಾರ ನಗರ ಸೇರಿ ಜಿಲ್ಲೆಯ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕೈಂಕರ್ಯಗಳು ಜರುಗಿದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ದೇವಸ್ಥಾನಗಳಲ್ಲಿ ಮಹಾಸಂಕಲ್ಪ, ಪಂಚಾಮೃತ ಅಭಿಷೇಕ, ಮಹಾಗಣಪತಿ ಪೂಜೆ, ಕಳಶಾರಾಧನೆ, ನವಗ್ರಹ ಹೋಮ, ಪಂಚಮುಖಿ ಆಂಜನೇಯಸ್ವಾಮಿ ಹೋಮ, ರಜತಾಲಂಕಾರ, ಸುಗಮ ಸಂಗೀತ ಕಾರ್ಯಕ್ರಮಗಳು ನಡೆದವು. ಹನುಮ ನಾಮ ಸ್ಮರಿಸಲಾಯಿತು. ವಿವಿಧೆಡೆ ಭಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದೇವಸ್ಥಾನ ಮತ್ತು ದೇವರ ಮೂರ್ತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಗಳ ಕಡೆಗೆ ಹೆಜ್ಜೆ ಹಾಕಿದರು. ಶೆಟ್ಟಿಹಳ್ಳಿ ಆಂಜನೇಯಸ್ವಾಮಿ, ಆರ್‌ಟಿಒ ಕಚೇರಿ ಮುಂಭಾಗದಲ್ಲಿರುವ ವರ ಪ್ರಸಾದ ವೀರಾಂಜನೇಯ ಸ್ವಾಮಿ ದೇಗುಲ, ಬಟವಾಡಿ ಸಮೀಪದ ಭಕ್ತಾಂಜನೇಯಸ್ವಾಮಿ ದೇವಸ್ಥಾನ, ವಿದ್ಯಾನಗರದ ಪುಟ್ಟಾಂಜನೇಯ ಸ್ವಾಮಿ ದೇಗುಲ, ಹನುಮಂತಪುರದ ಬಯಲಾಂಜನೇಯ ಸ್ವಾಮಿ ದೇವಾಲಯ, ಮೆಳೇಕೋಟೆಯ ಅಭಯ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಜಾಸ್ತಿ ಇತ್ತು.
ರಥೋತ್ಸವ: ಹನುಮದ್ ವ್ರತದ ಅಂಗವಾಗಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಹನುಮನ ರಥೋತ್ಸವ ಅದ್ದೂರಿಯಾಗಿ ನೆರವೇರಿತು. ವಿವಿಧ ಪುಷ್ಪಗಳಿಂದ ಅಲಂಕರಿಸಿದ್ದ ರಥದಲ್ಲಿ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ರಥ ಮುಂದಕ್ಕೆ ಸಾಗುತ್ತಿದ್ದಂತೆ ‘ಜೈ ಶ್ರೀರಾಮ್’, ‘ಜೈ ಹನುಮಾನ್’ ಘೋಷಣೆಗಳ ಸದ್ದು ಜೋರಾಯಿತು.
ನೂರಾರು ಸಂಖ್ಯೆ ಜನ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿ, ರಥೋತ್ಸವಕ್ಕೆ ಸಾಕ್ಷಿಯಾದರು. ದೇವರ ದರ್ಶನಕ್ಕೆ ಆಗಮಿಸುವವರಿಗೆ ಹೆಸರು ಬೇಳೆ, ಪಾನಕ, ಮಜ್ಜಿಗೆ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.