ADVERTISEMENT

ಎಚ್‌ಡಿಕೆ ಹೇಳಿಕೆ ಆಧಾರ ರಹಿತ: ಆರೋಪ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 6:36 IST
Last Updated 18 ಅಕ್ಟೋಬರ್ 2021, 6:36 IST
ಟಿ.ಎಸ್.ಸುನೀಲ್ ಪ್ರಸಾದ್
ಟಿ.ಎಸ್.ಸುನೀಲ್ ಪ್ರಸಾದ್   

ತುಮಕೂರು: ‘ಸಿಂಡಿಕೇಟ್ ಸದಸ್ಯರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ’ ಎಂದು ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಟಿ.ಎಸ್. ಸುನೀಲ್ ಪ್ರಸಾದ್ ಟೀಕಿಸಿದ್ದಾರೆ.

ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸತ್ಯಕ್ಕೆ ದೂರವಾದ ವಿಚಾರವನ್ನು ತಮ್ಮ ರಾಜಕೀಯ ಹಿತಾಸಕ್ತಿ, ಪ್ರಚಾರಕ್ಕಾಗಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ತಕ್ಷಣ ಹಿಂಪಡೆಯಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

‘ಸಿಂಡಿಕೇಟ್ ಸದಸ್ಯರು ವಿಶ್ವವಿದ್ಯಾನಿಲಯದ ಗುಣಮಟ್ಟ,ಮೌಲ್ಯವರ್ಧನೆಗೆ ಶ್ರಮಿಸುತ್ತಿದ್ದಾರೆ. ನನ್ನನ್ನೂ ಸೇರಿದಂತೆ ಹಲವು ಸದಸ್ಯರು ಸ್ವಂತ ಹಣವನ್ನು ಖರ್ಚು ಮಾಡಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಯ ಶ್ಲಾಘಿಸುವುದು ಬಿಟ್ಟು, ಕೇವಲ ರಾಜಕೀಯ ಹಿತಾಸಕ್ತಿಗಾಗಿ ಆರೋಪ ಮಾಡುವುದು ಸರಿಯಲ್ಲ’ ಎಂದಿದ್ದಾರೆ.

ADVERTISEMENT

‘ಕುಮಾರಸ್ವಾಮಿ ಮಾಡಿರುವ ಆರೋಪ ಸಾಬೀತುಪಡಿಸಿದರೆ ಆ ಕ್ಷಣವೇ ರಾಜೀನಾಮೆ ನೀಡುವುದಕ್ಕೆ ಸಿದ್ಧನಿದ್ದೇನೆ. ವಂಶಾಡಳಿತ ಅಥವಾ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವಂತಹ ಸಂಸ್ಕಾರ ನಮಗೆ ದೊರೆತಿಲ್ಲ. ಈ ರೀತಿ ಹಗುರವಾದ ಹೇಳಿಕೆ ನೀಡುವುದನ್ನು ಮುಂದುವರೆಸಿದರೆ ಕಾನೂನು ಹೋರಾಟ ಮಾಡಲಾಗುವುದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.