ತುಮಕೂರು: ರಾಜ್ಯದಲ್ಲಿ 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ನಗರದ ಹೊರವಲಯದ ಎಚ್.ಎಂ.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 25 ಲಕ್ಷ, ಜಿಲ್ಲೆಯಲ್ಲಿ 1.17 ಲಕ್ಷ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜೂಮ್ಯಾಟೊ, ಸ್ವಿಗ್ಗಿ, ಫ್ಲಿಪ್‍ಕಾರ್ಟ್ ಸಂಸ್ಥೆಗಳ ಡೆಲಿವರಿ ಕಾರ್ಮಿಕರಿಗೆ ₹ 2 ಲಕ್ಷ ಅಪಘಾತ ಪರಿಹಾರ ಹಾಗೂ ಜೀವವಿಮೆ ಸೇರಿದಂತೆ ₹4 ಲಕ್ಷ ವಿಮೆ ಸೌಲಭ್ಯ ಒದಗಿಸುವ ಸಲುವಾಗಿ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 30,256, ಜಿಲ್ಲೆಯ 809 ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳಿಗಾಗಿ ಜಾರಿಗೆ ತಂದಿರುವ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 98 ಪ್ರಕರಣಗಳಲ್ಲಿ ₹4.22 ಕೋಟಿ ಪರಿಹಾರ ವಿತರಿಸಲಾಗಿದೆ. ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಕಾರ್ಮಿಕರು ಸೇರಿದಂತೆ ರಾಜ್ಯದಲ್ಲಿ 40 ಲಕ್ಷ ಕಾರ್ಮಿಕರು ದುಡಿಯುತ್ತಿದ್ದಾರೆ. ಅಂತಹವರಿಗೆ ಸಾಮಾಜಿಕ ಭದ್ರತೆ, ಕಲ್ಯಾಣ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೋಂದಣಿ ಪೋರ್ಟಲ್ ಆರಂಭಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ‘ಕಾರ್ಮಿಕ ಸಂಘಟನೆಗಳು ಒಟ್ಟಾಗಿದ್ದರೆ ಮಾತ್ರ ಸವಾಲುಗಳನ್ನು ಎದುರಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಕಾರ್ಮಿಕ ಸಂಘಟನೆಗಳು ರಾಜಕೀಯ ಪ್ರವೇಶ ಮಾಡಬಾರದು’ ಎಂದು ಸಲಹೆ ಮಾಡಿದರು.
ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್‌ಗೌಡ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜು, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್‌ರಾಜ್ ಮೌರ್ಯ, ಕಾರ್ಮಿಕ ಆಯಕ್ತ ಎಚ್.ಎನ್.ಗೋಪಾಲಕೃಷ್ಣ, ಜಂಟಿ ಆಯುಕ್ತ ಎಸ್.ಬಿ.ರವಿಕುಮಾರ, ಸಹಾಯಕ ಆಯುಕ್ತರಾದ ಕೆ.ಎಲ್.ರವಿಕುಮಾರ್, ಬಿ.ಇ.ಶಿವಕುಮಾರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್ಪಿ ಕೆ.ವಿ.ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಪಾಲ್ಗೊಂಡಿದ್ದರು.
ಅಸಂಘಟಿತ ಕಾರ್ಮಿಕರಿಗೆ ಜಿಲ್ಲೆಯಲ್ಲಿರುವ ಖಾಸಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು.– ಜಿ.ಬಿ.ಜ್ಯೋತಿಗಣೇಶ್, ಶಾಸಕ
ಅಸಂಘಟಿತ ಕಾರ್ಮಿಕರನ್ನು ಸಮಾಜದ ಮುಂಚೂಣಿಗೆ ತಂದು ಭವಿಷ್ಯನಿಧಿ ವಿಮೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು.– ಬಿ.ಸುರೇಶ್‌ಗೌಡ, ಶಾಸಕ
ಕಾರ್ಮಿಕ ಭವನ ಉದ್ಘಾಟನೆ
ತುಮಕೂರು: ನಗರದ ಹನುಮಂತಪುರ ಗಣೇಶ ನಗರದಲ್ಲಿ ₹3.20 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬುಧವಾರ ಉದ್ಘಾಟಿಸಿದರು. ಮುಂದಿನ ದಿನಗಳಲ್ಲಿ ಭವನವು ಕಾರ್ಮಿಕರ ಸಭೆ ತರಬೇತಿ ಶಿಬಿರಗಳಿಗೆ ಉಪಯೋಗವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.