
ತುಮಕೂರು: ಉದ್ಯೋಗ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಹೊರ ಗುತ್ತಿಗೆ ನೌಕರರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೊರ ಗುತ್ತಿಗೆ ನೌಕರರ ಸೇವೆಯನ್ನು ಕಾಯಂ ಮಾಡಬೇಕು. ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸಬೇಕು. ಒಳಗುತ್ತಿಗೆ ಪದ್ಧತಿಗೆ ಸೇರಿಸಿ ಸೇವಾ ಭದ್ರತೆ ಒದಗಿಸಬೇಕು. ಕನಿಷ್ಠ ವೇತನ ಹೆಚ್ಚಳ ಮಾಡಬೇಕು. ಹೊರ ಗುತ್ತಿಗೆ ನೌಕರರ ಪರವಾಗಿ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು, ಈ ದ್ವಂದ್ವ ನಿಲುವಿನ ಬದಲಾಗಿ ಸ್ಪಷ್ಟ ನಿಲುವು ತಿಳಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಆಸ್ಪತ್ರೆಯಿಂದ ಆರಂಭವಾದ ಮೆರವಣಿಗೆ ಅಶೋಕ ರಸ್ತೆ, ಡಿಎಚ್‌ಒ ಕಚೇರಿ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಂಘದ ಅಧ್ಯಕ್ಷ ಅಕ್ಷಯ್ ಡಿ.ಎಂ.ಗೌಡ ಮಾತನಾಡಿ, ‘ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ಮಾನ್ ವಿಭಾಗದಲ್ಲಿ ರಾಜ್ಯದಾದ್ಯಂತ 25 ಸಾವಿರಕ್ಕೂ ಹೆಚ್ಚು ಮಂದಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ನೌಕರರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಎಲ್ಲರಿಗೂ ಸೇವಾ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.
ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಸೇವೆ ಕಾಯಂ ಮಾಡುವವರೆಗೂ ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಬೇಕು. ಗುತ್ತಿಗೆ ನೌಕರರ ಬಗ್ಗೆ ಮೂಡಿರುವ ಗೊಂದಲವನ್ನು ಸರ್ಕಾರವೇ ನಿವಾರಣೆ ಮಾಡಬೇಕು ಎಂದು ಮನವಿ ಮಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮಂಜುಳಾ, ‘ನಗರದಲ್ಲಿ ಈಚೆಗೆ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗಿದೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.
ಸಂಘದ ಪದಾಧಿಕಾರಿಗಳಾದ ಸಿದ್ದಪ್ಪ, ರವೀಶ್, ಯೋಗೀಶ್, ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಮ್, ಪ್ರಧಾನ ಕಾರ್ಯದರ್ಶಿ ಸತೀಶ ಕುಮಾರ್ ಮೊದಲಾದವರು ಭಾಗವಹಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.