ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು
ತುಮಕೂರು: ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಹೊರಗುತ್ತಿಗೆ ಏಜೆನ್ಸಿಗಳಿಂದ ಆಗುತ್ತಿರುವ ಶೋಷಣೆ ತಪ್ಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.
ಹೊರಗುತ್ತಿಗೆ ಏಜೆನ್ಸಿಗಳಿಂದ ಆಗುತ್ತಿರುವ ಶೋಷಣೆ ತಪ್ಪಿಸಲು ಬೀದರ್ ಮಾದರಿಯಲ್ಲಿ ಸೊಸೈಟಿ ಆರಂಭಿಸಬೇಕು. ಎಲ್ಲಾ ಹೊರಗುತ್ತಿಗೆ ನೌಕರರನ್ನು ಕಾಯಂ ಮಾಡಿ, ಸೇವಾ ಭದ್ರತೆ ಒದಗಿಸಬೇಕು. ನಿವೃತ್ತಿವರೆಗೂ ಕೆಲಸದಿಂದ ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿದರು.
ಬೀದರ್ ಮಾದರಿಯಲ್ಲಿ ಸೊಸೈಟಿ ಸ್ಥಾಪಿಸುವಂತೆ ಕಳೆದ 6 ತಿಂಗಳ ಹಿಂದೆಯೇ ಸರ್ಕಾರ ಆದೇಶಿಸಿದೆ. ಆದರೆ ಜಿಲ್ಲಾ ಆಡಳಿತ ಈವರೆಗೂ ಸ್ಪಂದಿಸಿಲ್ಲ. ಆರು ತಿಂಗಳಲ್ಲಿ ಮೂರು ಬಾರಿ ಮನವಿ ಕೊಟ್ಟಿದ್ದರೂ ಕ್ರಮ ಕೈಗೊಂಡಿಲ್ಲ. ಹಾಸ್ಟೆಲ್‍ಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಾಕಷ್ಟು ಸಂಖ್ಯೆಯ ಜನರು ದುಡಿಯುತ್ತಿದ್ದಾರೆ. ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಮಹೇಶ್, ಮುಖಂಡರಾದ ಹೇಮಂತ್, ಮಂಜುನಾಥ್, ಆನಂದ್, ಶಿವಪ್ಪ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಜಿ.ಎಚ್.ರವಿಕುಮಾರ್, ಜಿ.ಎಚ್.ಮಾರುತಿ, ಗಂಗನರಸಯ್ಯ, ಶಿವಲಿಂಗಮೂರ್ತಿ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.