ತುಮಕೂರು: ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಲು ಹೆಬ್ಬಾಕ ಬಳಿ 15 ಎಕರೆ ಜಾಗ ಗುರುತಿಸಿದ್ದು, ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ನಗರದಲ್ಲಿ ಮಂಗಳವಾರ ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ, ಕಾರ್ಮಿಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾಧಿಕಾರಿ ಅನುಮತಿ ನೀಡಿದ ನಂತರ ಪಾಲಿಕೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಹತ್ತಾರು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ಅನಾರೋಗ್ಯದಿಂದ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿವೆ. ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.
ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ‘ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲಿಯೇ ಪೌರ ಕಾರ್ಮಿಕರಿಗೆ ಆರೋಗ್ಯ, ಜೀವ ಹಾಗೂ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ಕಸ ಬಿಸಾಡುವ ನಾಗರಿಕರಿಂದ ₹10 ಲಕ್ಷ ದಂಡ ವಸೂಲಿ ಮಾಡಲಾಗಿದೆ’ ಎಂದರು.
ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿನಯ್‌ಕುಮಾರ್, ಸುರೇಶ್‌ಕುಮಾರ್, ಪ್ರವೀಣ್‌ಕುಮಾರ್, ಆರೋಗ್ಯಾಧಿಕಾರಿ ಡಾ.ಯೋಗೀಶ್, ನಗರ ಯೋಜನಾಧಿಕಾರಿ ಸಂಗಪ್ಪ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.