
ಸಾಂದರ್ಭಿಕ ಚಿತ್ರ
ಚಿಕ್ಕನಾಯಕನಹಳ್ಳಿ: ಪಟ್ಟಣದ ಪೊಲೀಸ್ ಠಾಣೆಯ ಆಡಳಿತಾತ್ಮಕ ನಿರ್ವಹಣೆ ಮತ್ತು ಸಿಬ್ಬಂದಿಯ ಕಾರ್ಯವೈಖರಿ ತೃಪ್ತಿದಾಯಕವಾಗಿದೆ ಎಂದು ಕೇಂದ್ರ ವಲಯ ಐಜಿಪಿ ಲಾಬೂರಾಮ್ ಪ್ರಶಂಸಿಸಿದರು.
ಶನಿವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೂರು ತಾಸು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಠಾಣೆಯಲ್ಲಿನ ಅಪರಾಧ ದಾಖಲೆಗಳು ಮತ್ತು ಪ್ರಕರಣಗಳ ಪಟ್ಟಿಗಳ ವಿವರ ಪರಿಶೀಲಿಸಲಾಗಿದೆ. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ಸ್ಥಳೀಯ ಅಧಿಕಾರಿಗಳು ಹೆಚ್ಚಿನ ಆಸಕ್ತಿ ತೋರಿದ್ದಾರೆ. ಇದೇ ಶಿಸ್ತನ್ನು ಮುಂದೆಯೂ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.
ಠಾಣೆಗೆ ಬರುವ ಜನ ಸಾಮಾನ್ಯರ ದೂರುಗಳಿಗೆ ತಕ್ಷಣ ಸ್ಪಂದಿಸಿ ನ್ಯಾಯ ಒದಗಿಸಬೇಕು. ಸಾರ್ವಜನಿಕರು ಸಂಕಷ್ಟದಲ್ಲಿದ್ದಾಗ ಪೊಲೀಸ್ ಠಾಣೆಗಳು ಭರವಸೆ ಕೇಂದ್ರಗಳಾಗಿ ಕೆಲಸ ಮಾಡಬೇಕು ಎಂದರು.
ಮದ್ಯ ಅಕ್ರಮ ಮಾರಾಟ ಸೇರಿದಂತೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಶೂನ್ಯ ಸಹನೆ ಹೊಂದಿರಬೇಕು. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.
ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಮನವಿ
ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ವಿಶೇಷ ಅನುದಾನ ಬಳಸಿಕೊಂಡು ಸಿಸಿಟಿವಿ ಯೋಜನೆಯನ್ನು ಜಾರಿಗೆ ತರಬೇಕು. ಪಟ್ಟಣದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ವಾಹನ ದಟ್ಟಣೆ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆ ಮತ್ತು ಅಪರಾಧ ತಡೆಗಟ್ಟುವಿಕೆಗಾಗಿ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮನವಿ ಸಲ್ಲಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ತಿಪಟೂರು ಡಿವೈಎಸ್‌ಪಿ ಜಯಲಕ್ಷ್ಮಮ್ಮ, ಸಿಪಿಐ ಜನಾರ್ಧನ್, ಪಿಎಸ್‌ಐ ಹೇಮಂತ್, ದ್ರಾಕ್ಷಾಯಿಣಿ ಹಾಗೂ ಠಾಣಾ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.