ADVERTISEMENT

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚುವ ಸಾಧ್ಯತೆ: ಜಿಲ್ಲಾಧಿಕಾರಿ ರಾಕೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 16:47 IST
Last Updated 24 ಜೂನ್ 2020, 16:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಜಿಲ್ಲೆಯ ಗ್ರಾಮೀಣ ಭಾಗಕ್ಕೂ ಕೊರೊನಾ ಸೋಂಕು ವ್ಯಾಪಿಸಿದೆ. ಈಗಾಗಲೇ ಕೆಲವು ಹಳ್ಳಿಗಳನ್ನೂ ಸೀಲ್‌ಡೌನ್ ಮಾಡಲಾಗಿದೆ. ಜನರು ಭಯಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ಹೆಚ್ಚಳದ ಬಗ್ಗೆ ಸ್ವತಃ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರೇ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಮುಂದಿನ ದಿನಗಳಲ್ಲಿ ಹೆಚ್ಚಲಿದೆ. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಇದ್ದಲ್ಲಿ ನಿರ್ಲಕ್ಷಿಸದೆ ಪರೀಕ್ಷಿಸಿಕೊಳ್ಳಿ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದರು.

ಸರ್ಕಾರದ ಆದೇಶದ ಅನ್ವಯ ಪ್ರತಿ ತಾಲ್ಲೂಕಿನ ಪ್ರಾಥಮಿಕ ಆಸ್ಪತ್ರೆಗಳಲ್ಲಿ ‘ಕೋವಿಡ್-19 ಕೇರ್ ಸೆಂಟರ್’ ತೆರೆದು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಕೊರೊನಾಗೆ ಚಿಕಿತ್ಸೆ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ADVERTISEMENT

‘ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಈಗಾಗಲೇ ಮೂರುನಾಲ್ಕು ಬಾರಿ ತೆರಳಿ ಆರೋಗ್ಯ ಪರೀಕ್ಷೆ ನಡೆಸಿದ್ದಾರೆ. ಕ್ವಾರಂಟೈನ್ ಕೇಂದ್ರಗಳು ಹಾಗೂ ಕೋವಿಡ್ ಆಸ್ಪತ್ರೆಯಲ್ಲಿ ಗುಣಮಟ್ಟದ ಆಹಾರ ಒದಗಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದೇನೆ. ಅಲ್ಲದೆ ಈ ಬಗ್ಗೆ ನಿಗಾವಹಿಸುವಂತೆ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್‌ಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದರು.

ಡಿಎಚ್‍ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಇದ್ದರು.

ಇಲ್ಲಿಯವರೆಗಿನ ಕೊರೊನಾ ಪ್ರಕರಣಗಳು

ತಾಲ್ಲೂಕು;ಸಂಖ್ಯೆ

ಚಿ.ನಾ.ಹಳ್ಳಿ; 2
ಗುಬ್ಬಿ; 3
ಕೊರಟಗೆರೆ; 1
ಕುಣಿಗಲ್; 1
ಮಧುಗಿರಿ; 4
ಪಾವಗಡ; 5
ಶಿರಾ; 15
ತಿಪಟೂರು; 3
ತುಮಕೂರು; 19
ತುರುವೇಕೆರೆ; 4

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.