ADVERTISEMENT

ತುಮಕೂರು: ಜಿಲ್ಲೆಯಲ್ಲಿ ಹೆಚ್ಚಿದ ಡೆಂಗಿ ಪ್ರಕರಣ

ಜನ ಸಂಪರ್ಕ ಸಭೆ ನಡೆಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2023, 7:16 IST
Last Updated 17 ಸೆಪ್ಟೆಂಬರ್ 2023, 7:16 IST

ತುಮಕೂರು: ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಲ್ಲ ಗ್ರಾಮಗಳಲ್ಲಿ ಫಾಗಿಂಗ್‌ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಡಳಿತ ಸುಧಾರಣೆಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಜನ ಸಂಪರ್ಕ ಸಭೆ ನಡೆಸಬೇಕು. ಸಭೆಗೂ ಮುನ್ನ ಜನರಿಂದ ಅಹವಾಲು ಸ್ವೀಕರಿಸಬೇಕು. ಶಾಲೆ, ವಸತಿ ನಿಲಯ, ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಒಂದು ವಾರದ ಒಳಗೆ ನಿವೇಶನ ಗುರುತಿಸಿ ವರದಿ ಸಲ್ಲಿಸಬೇಕು. ಇದುವರೆಗೆ ಜಾಗ ಗುರುತಿಸದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಸೂಚಿಸಿದರು.

ADVERTISEMENT

ಗರಿಷ್ಠ ಮಾರಾಟ ಬೆಲೆಗಿಂತ (ಎಂಆರ್‌ಪಿ) ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ರೈತರು ಬರಗಾಲದಿಂದ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಅವರಿಗೆ ಮತ್ತಷ್ಟು ಆರ್ಥಿಕ ಹೊರೆಯಾಗಬಾರದು. ಕೃಷಿ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿ ನಿಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಹೆಚ್ಚಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಊಟ, ಕುಡಿಯುವ ನೀರು, ಶೌಚಾಲಯ ಒಳಗೊಂಡಂತೆ ಇತರೆ ಸೌಲಭ್ಯಗಳಲ್ಲಿ ಕೊರತೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿ.ಪಂ ಸಿಇಒ ಜಿ.ಪ್ರಭು, ‘ಗ್ರಾ.ಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ಉದ್ಯಾನವನ, ಆಟದ ಮೈದಾನ ನಿರ್ಮಿಸುವ ಉದ್ದೇಶವಿದೆ. ಪ್ರವಾಸಿ ತಾಣಗಳಲ್ಲಿ ಸ್ವಚ್ಛ ಭಾರತ ಯೋಜನೆಯಡಿ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಬೇಕು. ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಚಿಂತನೆ ನಡೆದಿದೆ’ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಮರಿಯಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎನ್.ರಮೇಶ್‌, ಡಿಎಚ್‌ಒ ಡಾ.ಡಿ.ಎನ್.ಮಂಜುನಾಥ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.