ADVERTISEMENT

ತುಮಕೂರು: ಕನಿಷ್ಠ ವೇತನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 4:07 IST
Last Updated 11 ಆಗಸ್ಟ್ 2021, 4:07 IST
ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು
ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು   

ತುಮಕೂರು: ‘ಭಾರತ ರಕ್ಷಿಸಿ’ ಆಂದೋಲನದ ಅಂಗವಾಗಿ ಸ್ಕೀಮ್ ವರ್ಕರ್ಸ್ ಫೆಡರೇಷನ್ ಆಫ್ ಇಂಡಿಯಾ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ– ಎಐಯುಟಿಯುಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿ ಭಾಗವಹಿಸಿದ್ದರು.

ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಕನಿಷ್ಠ ₹21 ಸಾವಿರ ಮಾಸಿಕ ವೇತನ, ₹10 ಸಾವಿರ ಪಿಂಚಣಿ ಕೊಡಬೇಕು. ನಿವೃತ್ತಿ ಹೊಂದುವ ಕಾರ್ಯಕರ್ತೆಯರಿಗೆ ₹5 ಲಕ್ಷ ನಿವೃತ್ತಿ ಇಡಿಗಂಟು ನೀಡಬೇಕು. ಕೋವಿಡ್ ಸೋಂಕಿಗೆ ಒಳಗಾದ ಕಾರ್ಯಕರ್ತೆಯರಿಗೆ ಉಚಿತ ಚಿಕಿತ್ಸೆ, ಕನಿಷ್ಠ ₹1 ಲಕ್ಷ ಆರೋಗ್ಯ ಸಹಾಯಧನ, ಸಾವಿಗೀಡಾದ ಕುಟುಂಬಕ್ಕೆ ಘೋಷಿತ ₹50 ಲಕ್ಷ ಪರಿಹಾರ ಧನ ತಕ್ಷಣ ನೀಡಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ಸಿಬ್ಬಂದಿಗೆ ಕಳೆದ 6 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. ಕಾರ್ಮಿಕ, ರೈತ, ಜನವಿರೋಧಿ ಕೃಷಿ ಕಾನೂನು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂತೆಗೆದುಕೊಳ್ಳಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ಔಷಧಿ ಸಹಿತ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಕೋವಿಡ್ ಮುಂದುವರಿಯುವ ಅವಧಿಯವರೆಗೂ ಪ್ರತಿಯೊಬ್ಬರಿಗೂ 10 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ಕೊಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಿ ಕೋವಿಡೇತರ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು. ಸಾರ್ವಜನಿಕ ಉದ್ದಿಮೆಗಳು, ಸರ್ಕಾರಿ, ಅರೆ ಸರ್ಕಾರಿ, ನಿಗಮ, ಮಂಡಳಿ, ಕಂಪನಿ, ಕಾರ್ಪೊರೇಷನ್ ಇತರ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು. ಗುತ್ತಿಗೆ, ಹೊರಗುತ್ತಿಗೆ ದುಡಿಮೆ ನಿಷೇಧಿಸಬೇಕು. ಎಲ್ಲಾ ಕಾರ್ಮಿಕರು, ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಜಿಲ್ಲಾ ಸಂಚಾಲಕಿ ಮಂಜುಳ ಗೋನವಾರ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.