ತುಮಕೂರು: ನಗರದ ಕೋಟೆ ಆಂಜನೇಯ ಸ್ವಾಮಿ ದೇಗುಲದ ಮುಂಭಾಗದಲ್ಲಿರುವ ಎಂಪ್ರೆಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಭೇಟಿ ನೀಡಿ, ಶಾಲೆಯ ಹಾಳಾಗಿರುವ ಕಟ್ಟಡ ವೀಕ್ಷಿಸಿದರು.
160 ವರ್ಷಗಳ ಹಿಂದೆ ನಿರ್ಮಿಸಿದ್ದ ಶಾಲೆಯ ಕೊಠಡಿಗಳು ಸಂಪೂರ್ಣವಾಗಿ ಹಾಳಾಗಿವೆ. ಸರಿಯಾದ ಕಾಂಪೌಂಡ್ ಇಲ್ಲದೆ ಶಾಲೆಯ ಆವರಣ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಆವರಣದಲ್ಲಿಯೇ ಕಸ ತುಂಬಿಕೊಂಡಿದೆ. ಮುರಿದು ಹೋಗಿರುವ ಬಾಗಿಲು, ಕಿಟಕಿಗಳನ್ನು ವೀಕ್ಷಣೆ ಮಾಡಿದರು.
ನಗರದ ಹೃದಯ ಭಾಗದಲ್ಲಿರುವ ಶತಮಾನ ಕಂಡ ಶಾಲೆಯ ಬಗ್ಗೆ ಜಿಲ್ಲಾ ಆಡಳಿತ ನಿರ್ಲಕ್ಷ ವಹಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಶಾಲೆಯ ಬಗ್ಗೆ ದೂರು ದಾಖಲಾಗಿದ್ದು, ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಶೀಘ್ರದಲ್ಲಿಯೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವಂತೆ’ ಮಕ್ಕಳ ಹಕ್ಕುಗಳ ಆಯೋಗದ ಕಾನೂನು ಕೋಶದ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆಗೆ ಒಂದು ಶತಮಾನಕ್ಕೂ ಹೆಚ್ಚಿನ ಇತಿಹಾಸ ಇದೆ. ಒಂದು ಪಾರಂಪರಿಕ ತಾಣವಾಗಿ ಅಭಿವೃದ್ಧಿಗೊಳಿಸಬೇಕಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಒಳಗಾಗಿರುವುದು ವಿಪರ್ಯಾಸ ಎಂದರು.
ಶಾಲೆ ಕಟ್ಟಡ ಶಿಥಿಲಾವಸ್ಥೆ ತಲುಪಿದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.