ತುಮಕೂರು: ‘ನ್ಯಾಯಬೆಲೆ ಅಂಗಡಿಗಳಲ್ಲಿ 10 ಕೆ.ಜಿ ಬದಲಾಗಿ, 8 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ₹10 ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಎಲ್ಲ ಅಂಗಡಿ ಬಳಿ ಸಹಾಯವಾಣಿ 1967 ನಮೂದಿಸುವಂತೆ’ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಚಂದ್ರಶೇಖರ್‌ಗೌಡ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
‘ಸಮಸ್ಯೆ ಕಂಡು ಬಂದಲ್ಲಿ ನೇರವಾಗಿ ಸಹಾಯವಾಣಿ ಸಂಪರ್ಕಿಸಿ ದೂರು ನೀಡುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ತೂಕದಲ್ಲಿ ವ್ಯತ್ಯಾಸ, ಬಯೊಮೆಟ್ರಿಕ್ ಶುಲ್ಕ ವಸೂಲಿ ಇತರೆ ಅವ್ಯವಸ್ಥೆ ತಡೆಯಲು ಸಮಿತಿಯ ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಯಡಿ 19,70,847 ಫಲಾನುಭವಿಗಳಿಗೆ ₹3,554 ಕೋಟಿ ಪಾವತಿ ಮಾಡಲಾಗಿದೆ. 15.54 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಸೌಲಭ್ಯ ಪಡೆದಿದ್ದು, ಇದುವರೆಗೆ ₹476.23 ಕೋಟಿ ವೆಚ್ಚವಾಗಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಈಶ್ವರಪ್ಪ, ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ ಮೊದಲಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.