ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿರುವ ಮುಖಂಡರ ಜತೆ ಚರ್ಚೆ ನಡೆಸಲು ಸರ್ಕಾರ ಮುಂದಾಗಿದೆ.
‘ಶಾಸಕರು, ರೈತ ಮುಖಂಡರ ಜತೆ ಮತ್ತೊಮ್ಮೆ ಚರ್ಚಿಸಲಾಗುವುದು. ಅವರ ಮನವೊಲಿಕೆಗೆ ಪ್ರಯತ್ನಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಹೋರಾಟಗಾರರು ನಮಗೆ ಒಂದಷ್ಟು ಸಮಯ ಕೊಡಿ, ನಮ್ಮೊಂದಿಗೆ ಚರ್ಚಿಸಿ ಎಂಬ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಉಪಮುಖ್ಯಮಂತ್ರಿ, ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಗಮನಕ್ಕೆ ತರಲಾಗಿದೆ. ಅವರು ಸಮಯ ಕೊಟ್ಟ ನಂತರ ಸಭೆ ನಡೆಸಲಾಗುವುದು ಎಂದರು.
ಜಿಲ್ಲೆಯ ಮುಖಂಡರು, ರೈತರ ಜತೆ ಸಭೆ ನಡೆಸುವ ಬಗ್ಗೆ ನೀರಾವರಿ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅವರು ತೆಗೆದುಕೊಳ್ಳುವ ತೀರ್ಮಾನ ಅಂತಿಮವಾಗಿರುತ್ತದೆ. ಅವರ ನಿರ್ಧಾರದಂತೆ ಕೆನಾಲ್ ನಿರ್ಮಾಣ ಕಾಮಗಾರಿ ನಡೆಯುತ್ತದೆ ಎಂದು ತಿಳಿಸಿದರು.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗವಹಿಸಿದ್ದ ಮಠಾಧೀಶರ ಮೇಲೆ ದಾಖಲಾದ ಎಫ್‌ಐಆರ್ ಹಿಂಪಡೆಯುವಂತೆ ಸೂಚಿಸಲಾಗಿದೆ. ಎಫ್‌ಐಆರ್‌ನಲ್ಲಿ ಸ್ವಾಮೀಜಿಗಳ ಹೆಸರು ಉಲ್ಲೇಖಿಸಿರಲಿಲ್ಲ. ಅವರಿಗೆ ನಾವು ಗೌರವ ಕೊಡಬೇಕು ಎಂದರು.
ಮುಖಂಡರ ಆಹ್ವಾನದ ಮೇರೆಗೆ ಸ್ವಾಮೀಜಿಗಳು ಭಾಗವಹಿಸಿದ್ದರು. ಅವರ ವಿರುದ್ಧ ದಾಖಲಿಸಿದ ಮೊಕದ್ದಮೆಗಳ ಕುರಿತು ಪುನರ್ ಪರಿಶೀಲನೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶಿಸಲಾಗಿದೆ. ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಪ್ರತಿಭಟನೆ ಸಮಯದಲ್ಲಿ ಬೇರೆಯವರು ಬಸ್‌ಗೆ ಕಲ್ಲು ಒಡೆದು, ವಾಹನಗಳಿಗೆ ಹಾನಿ ಮಾಡಿದ್ದಾರೆ. ಪೊಲೀಸರು ಸಿ.ಸಿ ಟಿ.ವಿ ಕ್ಯಾಮೆರಾ ವಿಡಿಯೊ ಪರಿಶೀಲಿಸಿದ್ದಾರೆ. ಕಾನೂನು ವಿರುದ್ಧ ನಡೆದುಕೊಂಡಿರುವವರ ಮೇಲೆ ಕ್ರಮ ಜರುಗಿಸುತ್ತಾರೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.