ADVERTISEMENT

ಗುಬ್ಬಿ: ರೈತರು, ಅಧಿಕಾರಿಗಳೊಂದಿಗೆ ಸಂವಾದ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2023, 13:39 IST
Last Updated 29 ಡಿಸೆಂಬರ್ 2023, 13:39 IST
ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದ ‘ರೈತರೊಂದಿಗೆ ನಾವು’ ಕಾರ್ಯಕ್ರಮ ಉದ್ಘಾಟಿಸಿದ ಮುರಳೀಧರ ಹಾಲಪ್ಪ
ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದ ‘ರೈತರೊಂದಿಗೆ ನಾವು’ ಕಾರ್ಯಕ್ರಮ ಉದ್ಘಾಟಿಸಿದ ಮುರಳೀಧರ ಹಾಲಪ್ಪ   

ಗುಬ್ಬಿ: ರೈತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಹಾಗೂ ಅನುದಾನದ ಜಾಗೃತಿ ಮೂಡಿಸಿ, ರೈತರು ಹಾಗೂ ಅಧಿಕಾರಿಗಳ ನಡುವೆ ಸಮನ್ವಯತೆ ಮೂಡಿಸುವ ಉದ್ದೇಶದಿಂದ ರೈತರೊಂದಿಗೆ ನಾವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.

ನಿಟ್ಟೂರಿನಲ್ಲಿ ಶುಕ್ರವಾರ ನಡೆದ ‘ರೈತರೊಂದಿಗೆ ನಾವು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಅಗತ್ಯವಿರುವ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನು ಸಾಕಾಣಿಕೆ, ಬೆಸ್ಕಾಂ ಹಾಗೂ ಬ್ಯಾಂಕ್‌ಗಳಲ್ಲಿ ಸಿಗುವ ಸೌಲಭ್ಯದ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು. 

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಗೊತ್ತಿಲ್ಲದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

ಮುಖಂಡ ಶಂಕರಾನಂದ್ ಮಾತನಾಡಿ, ಬೆಸ್ಕಾಂ, ಕಂದಾಯ ಹಾಗೂ ಸರ್ವೆ ಇಲಾಖೆಗಳಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ರೈತರು ದೂರುತ್ತಿರುವುದರಿಂದ, ಅಧಿಕಾರಿಗಳು ರೈತರ ಪರ ಕಾರ್ಯನಿರ್ವಹಿಸಲು ಬದ್ಧರಾಗಬೇಕು ಎಂದು ಹೇಳಿದರು.

ಸಾಮಾಜಿಕ ಅರಣ್ಯ, ಕಂದಾಯ, ಪಶುವೈದ್ಯಕೀಯ, ಬೆಸ್ಕಾಂ ಇಲಾಖೆಗಳಿಗೆ ಸಂಬಂಧಿಸಿದಂತೆ ರೈತರ ಜೊತೆ ಸಂವಾದ ನಡೆಸಿ ಜಾಗೃತಿ ಮೂಡಿಸಲಾಯಿತು. ಬೇಸಿಗೆ ಸಮೀಪಿಸುತ್ತಿರುವುದರಿಂದ ವಿದ್ಯುತ್ ಅಭಾವ ಉಂಟಾಗದಂತೆ ತುಂಬಾ ಹಳೆಯದಾಗಿರುವ ವಿದ್ಯುತ್ ತಂತಿ ಬದಲಾಯಿಸಿಕೊಡಬೇಕು ಎಂದು ಸ್ಥಳದಲ್ಲಿದ್ದ ಬೆಸ್ಕಾಂ ಎಇಇ ಅವರನ್ನು ರೈತರು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಮುಖಂಡರಾದ ಜಯಣ್ಣ, ಕೆ.ಆರ್.ತಾತಯ್ಯ, ರೇವಣಸಿದ್ದಪ್ಪ, ಸೌಭಾಗ್ಯಮ್ಮ, ಗುರುರೇಣುಕಾರಾಧ್ಯ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ರೈತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.