ADVERTISEMENT

ಭ್ರಷ್ಟಾಚಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 6:11 IST
Last Updated 29 ಜೂನ್ 2025, 6:11 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದರು   

ತುಮಕೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಅಶೋಕ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ, ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಭ್ರಷ್ಟಾಚಾರದಲ್ಲಿ ಮುಳುಗಿ, ಆಡಳಿತ ನಡೆಸಲು ವಿಫಲವಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಜಾ ಮಾಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದರು.

ADVERTISEMENT

ಕಳೆದ ಎರಡು ವರ್ಷಗಳಿಂದ ಜನರಿಗೆ ಉತ್ತಮ, ಕ್ರಿಯಾಶೀಲ ಆಡಳಿತ ನೀಡುವಲ್ಲಿ ಮುಖ್ಯಮಂತ್ರಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರ ಮನೆ ಮಾಡಿದ್ದು, ಸ್ವಜನ ಪಕ್ಷಪಾತ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ಮಿತಿಮೀರಿದ ಬಗ್ಗೆ ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಗುತ್ತಿಗೆದಾರರ ಬಾಕಿ ಹಣ ಪಾವತಿಯಲ್ಲೂ ವಿಳಂಬ ನೀತಿ ಅನುಸರಿಸಿ, ಭ್ರಷ್ಟಾಚಾರ ಮಾಡಲಾಗುತ್ತಿದೆ. ರೈತ ವಿರೋಧಿ ಸರ್ಕಾರವಾಗಿ ಮಾರ್ಪಟ್ಟಿದ್ದು, ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡಲಾಗುತ್ತಿದೆ. ಕೇವಲ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಜನರಿಗೆ ಘನಘೋರ ಅನ್ಯಾಯವೆಸಗುತ್ತಿದೆ ಎಂದು ದೂರಿದರು.

ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ ಕಟ್ಟೆಗಳ ಪುನಶ್ಚೇತನ, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರು ಒದಗಿಸುವಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ. ಬೆಂಗಳೂರಿನಲ್ಲಿ ಆರ್‌ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಅಮಾಯಕರನ್ನು ಬಲಿ ತೆಗೆದುಕೊಂಡಿದೆ ಎಂದು ಟೀಕಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಎಚ್.ನಿಂಗಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಮುಖಂಡರಾದ ಗುಬ್ಬಿ ನಾಗರಾಜು, ಕೆ.ಟಿ.ಶಾಂತಕುಮಾರ್ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.