ADVERTISEMENT

ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ

ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 5:31 IST
Last Updated 13 ಆಗಸ್ಟ್ 2025, 5:31 IST
ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಕೆ.ಎನ್.ರಾಜಣ್ಣ ಹಾಗೂ ಆರ್. ರಾಜೇಂದ್ರ ಅಭಿಮಾನಿಗಳು ಮಧುಗಿರಿಯಲ್ಲಿ ಪ್ರತಿಭಟನೆ ನಡೆಸಿದರು 
ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಕೆ.ಎನ್.ರಾಜಣ್ಣ ಹಾಗೂ ಆರ್. ರಾಜೇಂದ್ರ ಅಭಿಮಾನಿಗಳು ಮಧುಗಿರಿಯಲ್ಲಿ ಪ್ರತಿಭಟನೆ ನಡೆಸಿದರು    

ಮಧುಗಿರಿ: ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಕೆ.ಎನ್.ರಾಜಣ್ಣ ಹಾಗೂ ಆರ್.ರಾಜೇಂದ್ರ ಅಭಿಮಾನಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದ ಅಭಿಮಾನಿಗಳು ಪಟ್ಟಣದ ಎಂಎನ್‌ಕೆ ಸಮುದಾಯ ಭವನದಲ್ಲಿ ಜಮಾವಣೆಗೊಂಡು ಪ್ರತಿಭಟಿಸಿದರು.

ರಾಜಣ್ಣ ಅವರಿಗೆ ಯಾವುದೇ ನೋಟಿಸ್‌ ನೀಡದೇ ಏಕಾಏಕಿ ಸಂಪುಟದ ವಜಾಗೊಳಿಸಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ. ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ, ಮಧುಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ದೋಸೆ ಆಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ರಾಜಣ್ಣ ವಿರುದ್ಧ ಪಿತೂರಿ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಜಣ್ಣ ಕ್ಷೇತ್ರದ ಅಭಿವೃದ್ಧಿ ಚಿಂತಕರಾಗಿದ್ದರು. ಬಡವರ ಪರ ಕೆಲಸ ಮಾಡುತ್ತಿದ್ದರು. ಆದ್ದರಿಂದ ತಕ್ಷಣ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.

ಕೆಪಿಸಿಸಿ ಸದಸ್ಯ ಎಂ.ಎಸ್.ಮಲ್ಲಿಕಾರ್ಜುನಯ್ಯ ಮಾತನಾಡಿ, ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವುದಕ್ಕೆ ಕಾಂಗ್ರೆಸ್‌ಗೆ ಸಾಕಷ್ಟು ಅನಾನುಕೂಲವಾಗುತ್ತದೆ. ಹೈಕಮಾಂಡ್ ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಕ್ಷೇತ್ರದ ಪುರಸಭೆ, ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ತಿಳಿಸಿದರು.

ಸಹಕಾರ ಮಹಾಮಂಡಳ ನಿರ್ದೇಶಕ ಎನ್.ಗಂಗಣ್ಣ , ಜಿ.ಪಂ.ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣರೆಡ್ಡಿ, ಗೋಪಾಲಯ್ಯ, ಪುರಸಭೆ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್, ಉಪಾಧ್ಯಕ್ಷ ಸುಜಾತ ಶಂಕರನಾರಾಯಣ ಹಾಗೂ ಎಂ.ಕೆ.ನಂಜುಂಡಯ್ಯ, ಅಯೂಬ್, ಕೆ.ಪ್ರಕಾಶ್, ಇಂದಿರಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.