ಕುಣಿಗಲ್: ಶೋಷಿತ ಸಮುದಾಯದ ಶೈಕ್ಷಣಿಕ ಪ್ರಗತಿಗೆ ಸರ್ಕಾರ ವಸತಿ ಶಾಲೆಗಳನ್ನು ಪ್ರಾರಂಭಿಸುತ್ತಿದ್ದು, ತಾಲ್ಲೂಕಿನಲ್ಲಿ ₹22 ಕೋಟಿ ವೆಚ್ಚದಲ್ಲಿ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.
ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಹೊಸಕೆರೆ ಗ್ರಾಮದಲ್ಲಿ ಇಚೇಗೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
7 ಎಕರೆ ವಿಶಾಲ ಪ್ರದೇಶದಲ್ಲಿ ವಸತಿ ಶಾಲೆ ನಿರ್ಮಾಣವಾಗುತ್ತಿದ್ದು, ಮೊದಲ ಹಂತದಲ್ಲಿ ₹6.75 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಸುತ್ತಮುತ್ತ ಅರಣ್ಯ ಪ್ರದೇಶವಿರುವುದರಿಂದ ಆವರಣ ಗೋಡೆಗಳನ್ನು ಎತ್ತರಗೊಳಿಸಲು ಸಲಹೆ ನೀಡಿದರು.
ತಾಲ್ಲೂಕಿನಲ್ಲಿ ಹೋಬಳಿವಾರು ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಕಸಬಾ ಹೋಬಳಿಯಲ್ಲಿ ಮಾತ್ರ ಇನ್ನೂ ಪ್ರಾರಂಭವಾಗಬೇಕಿದೆ. ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರು, ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕಿದೆ. ಮಾತೃ ಭಾಷೆ ಜತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲಿ ಪ್ರಭುತ್ವ ಸಾಧಿಸಲು ವಿಫಲರಾಗುತ್ತಿರುವ ಕಾರಣ ಶೈಕ್ಷಣಿಕ ಪ್ರಗತಿ ಸಾಧಿಸಿದರೂ, ಇಂಗ್ಲಿಷ್ ಸಂವಹನ ಕೊರತೆಯಿಂದ ಉದ್ಯೋಗದಲ್ಲಿ ವಿಫಲವಾಗುತ್ತಿದ್ದಾರೆ ಎಂದರು.
ಅಡಿಟರ್ ನಾಗರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಹುಚ್ಚೆಗೌಡ, ಪ್ರಾಂಶುಪಾಲ ಎಂ.ವಿ.ವಸ್ರದ್, ಮೋಹನ್ ಕುಮಾರ್, ಎಂಜಿನಿಯರ್ ತನುಜ್ ಕುಮಾರ್ ಹಾಗೂ ಕೋಘಟ್ಟ ರಾಜಣ್ಣ, ಹಾಲುವಾಗಿಲು ಸ್ವಾಮಿ, ಬೋರೆಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.