ADVERTISEMENT

ವೀರಶೈವ–- ಲಿಂಗಾಯತರಲ್ಲಿ ಒಗ್ಗಟ್ಟಿನ ಕೊರತೆ

ಸಮುದಾಯದ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 2:52 IST
Last Updated 11 ಜನವರಿ 2021, 2:52 IST
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು   

ತುಮಕೂರು: ವೀರಶೈವ ಲಿಂಗಾಯತ ಸಮಾಜದಲ್ಲಿ ಒಗ್ಗಟ್ಟಿನ ಕೊರತೆ ಇದೆ. ಒಗ್ಗಟ್ಟಿದ್ದರೆ ಸಮಾಜ ಇನ್ನೂ ಎತ್ತರಕ್ಕೆ ಬೆಳೆಯಬಹುದು ಎಂದು ಸಂಸದ ಜಿ.ಎಸ್. ಬಸವರಾಜ್ ತಿಳಿಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಸಮಾವೇಶ, ಅಭಿನಂದನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಒಗ್ಗಟ್ಟಿಲ್ಲ ಎಂಬುದಕ್ಕೆ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೇ ಸಾಕ್ಷಿ. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಮುಂಚೂಣಯಲ್ಲಿರುವವರು ಸಮಾಜದಲ್ಲಿನ ಹಿಂದುಳಿದಿರುವವರನ್ನು ಮೇಲೆತ್ತಬೇಕು ಎಂದು ಸಲಹೆ ನೀಡಿದರು.

ADVERTISEMENT

ಬಸವಣ್ಣನ ಅನುಯಾಯಿಗಳಾಗಿ ನಾವು, ಎಲ್ಲರೂ ಒಂದೇ ಎನ್ನುವ ಭಾವನೆ ರೂಢಿಸಿಕೊಂಡು ಒಗ್ಗಟ್ಟಿನಿಂದ ಮೀಸಲಾತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಮಾತನಾಡಿ, 40 ವರ್ಷಗಳಿಗೂ ಹೆಚ್ಚು ಕಾಲ ವೀರಶೈವ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ನನ್ನನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿಗಮದ ಅಧ್ಯಕ್ಷನನ್ನಾಗಿ ಮಾಡಿದರು. ಅವರು ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.

ಆರ್ಥಿಕವಾಗಿ ಹಿಂದುಳಿದ ಹಾಗೂ ಶೈಕ್ಷಣಕವಾಗಿ ವಂಚಿತರಾದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುವೆ. ಸಮಾಜಕ್ಕೆ ಅರ್ಜಿ ಹಾಕಿಕೊಂಡು ಯಾರೂ ಹುಟ್ಟಿಲ್ಲ. ಇದು ಆಕಸ್ಮಿಕ. ಆದ್ದರಿಂದ ಸಂಪ್ರದಾಯ, ಸಂಸ್ಕೃತಿ, ಧರ್ಮ ಉಳಿಸಿಕೊಂಡು ಹೋಗುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಮಾತನಾಡಿ, ತುಮಕೂರು ನಗರದಲ್ಲಿ ಹಿಂದೆ ವೀರಶೈವ ಸಮಾಜದ ಶೇ 80 ರಷ್ಟು ಮಂದಿ ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಶೇ 20ಕ್ಕೆ ಇಳಿದಿದ್ದಾರೆ ಎಂದು ಹೇಳಿದರು.

ಮಾಕನಹಳ್ಳಿ ಜಂಗಮ ಮಠದ ಗಂಗಾಧರ ಸ್ವಾಮೀಜಿ, ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪರಮೇಶ್ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಿಕ್ಷಕರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಸಮಾಜದ ಶಿಕ್ಷಕರನ್ನು ಅಭಿನಂದಿಸಲಾಯಿತು.

ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಶಿವಶಂಕರಪ್ಪ, ತಾಲ್ಲೂಕು ಅಧ್ಯಕ್ಷ ಡಿ.ಎಸ್. ಪರಮಶಿವಯ್ಯ, ಟಿವಿಸಿ ಬ್ಯಾಂಕ್ ನಿರ್ದೇಶಕ ಕೊಪ್ಪಳ ನಾಗರಾಜ್, ಸಮಾಜದ ಮುಖಂಡರಾದ ಎಚ್.ಆರ್. ಮಲ್ಲಿಕಾರ್ಜುನಯ್ಯ, ಎಂ.ವಿ.ನಾಗಣ್ಣ, ಎಚ್.ಜಯಶಂಕರ್, ಟಿ.ಜೆ.ಜ್ಯೋತಿ ಪ್ರಕಾಶ್, ಪಿ.ಸಿ.ಜಯಕುಮಾರ್, ಸೋಮಶೇಖರ್ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.