
ತುಮಕೂರು: ತಾಲ್ಲೂಕಿನ ಬೆಳಗುಂಬ ಗ್ರಾಮದಲ್ಲಿ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ 2 ಎಕರೆ ಜಮೀನು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ.
ಗುತ್ತಿಗೆ ಷರತ್ತು ಉಲ್ಲಂಘಿಸಿ ಜಮೀನು ಬಳಸಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್, ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಷನ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿದೆ.
‘ಸರ್ಕಾರಿ ಜಾಗ ಸದುದ್ದೇಶಕ್ಕೆ ಬಳಕೆಯಾಗಬೇಕು. ಗುತ್ತಿಗೆ ಷರತ್ತು ಉಲ್ಲಂಘಿಸಿ, ಜಮೀನಿನಲ್ಲಿ ಸಭಾಂಗಣ ನಿರ್ಮಿಸಲಾಗುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಬೆಳಗುಂಬ ವೆಂಕಟೇಶ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿತ್ತು. ಜಮೀನಿನಲ್ಲಿ ಸಭಾಂಗಣ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ.
‘ಬೆಳಗುಂಬ ಗ್ರಾಮ ಪಂಚಾಯಿತಿ ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರುವುದರಿಂದ ಈ ಜಾಗ ಅನುಕೂಲವಾಗುತ್ತದೆ. ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾ ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಬೆಳಗುಂಬ ವೆಂಕಟೇಶ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.