
ತುಮಕೂರು: ತಾಲ್ಲೂಕಿನ ಕೆಸರುಮಡು ಸಮೀಪದ ಮುದಿಗೆರೆ- ತಿಮ್ಮಯ್ಯನಪಾಳ್ಯ ರಸ್ತೆಯಲ್ಲಿ ಶುಕ್ರವಾರ ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿಯಾಗಿ ಒಂದು ವರ್ಷದ ಗಂಡು ಚಿರತೆ ಮೃತಪಟ್ಟಿದೆ.
ತಲೆ, ಕಾಲಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
‘ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೆಸರುಮಡು ಸುತ್ತಮುತ್ತಲಿನ ಸಿ.ಸಿ ಟಿ.ವಿ ಕ್ಯಾಮೆರಾ ಪರಿಶೀಲಿಸಲಾಗುವುದು. ಚಿರತೆ ಸಾವಿಗೆ ಕಾರಣವಾದ ವಾಹನ ಚಾಲಕರ ವಿರುದ್ಧ ಕ್ರಮ ವಹಿಸಲಾಗುವುದು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಪ್ರತಿಕ್ರಿಯಿಸಿದರು.
‘ಕಳೆದ ವಾರ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ನೀಡಿದೆ. ವಿಷಯುಕ್ತ ಆಹಾರ ಸೇವನೆಯಿಂದ ಮಂಗಗಳು ಮೃತಪಟ್ಟಿವೆ. ಮಂಗನ ಕಾಯಿಲೆಯಿಂದಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಯಾರಾದರೂ ಉದ್ದೇಶ ಪೂರ್ವಕವಾಗಿ ವಿಷ ಹಾಕಿದ್ದರೆ ಅಥವಾ ರಸ್ತೆ ಬದಿ ಚೆಲ್ಲಿದ್ದ ಆಹಾರ ತಿಂದು ಮಂಗಗಳು ಸಾವನ್ನಪ್ಪಿವೆಯೇ ಎಂಬುವುದು ತನಿಖೆಯ ನಂತರ ತಿಳಿಯಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.