ತುಮಕೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸಂಸದ ಜಿ.ಎಸ್.ಬಸವರಾಜು ಹೊಸ ಹೆಸರು ತೇಲಿ ಬಿಟ್ಟರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇವೆ. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ಟಿಕೆಟ್ ನೀಡಿದರೆ ಫಲಿತಾಂಶದ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ. ಕಳೆದ ಚುನಾವಣೆಯಲ್ಲಿ ಅವರು ಸೋತಿದ್ದಾರೆ. ದುರಹಂಕಾರ ತೋರಿದವರಿಗೆ ಜನ ಮತ ಹಾಕುವುದಿಲ್ಲ. ಹೈಕಮಾಂಡ್ ನಾಯಕರು ಜನಾಭಿಪ್ರಾಯ ನೋಡಿಕೊಂಡು ಅಭ್ಯರ್ಥಿಯನ್ನು ಘೋಷಿಸುತ್ತಾರೆ ಎಂದರು.
ಲೋಕಸಭಾ ಸ್ಪರ್ಧೆಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಮುಖಂಡ ಎಸ್.ಪಿ.ಚಿದಾನಂದ್ ಸೇರಿದಂತೆ 10ಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಕತ್ತೆ ನಿಲ್ಲಿಸಿದರೂ ಪ್ರಧಾನಿ ಮೋದಿ ಮುಖ ನೋಡಿಕೊಂಡು ಜನ ಬಿಜೆಪಿಗೆ ಮತ ನೀಡುತ್ತಾರೆ ಎಂದು ಹೇಳಿದರು.
ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಜನರು ಬಿಜೆಪಿ ಪರ ಇದ್ದಾರೆ. ಯಾರೇ ಸ್ಪರ್ಧಿಸಿದರೂ ಗೆಲ್ಲಬಹುದು ಎಂದು ಸೋಮಣ್ಣ ಅವರಿಗೆ ಹೇಳಿದ್ದೇನೆ. ಮುಂದಿನ ಅಧಿವೇಶನದ ಸಮಯದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಯ ನೀಡಿದ್ದಾರೆ. ಆಗ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತರುತ್ತೇನೆ. ವಾಸ್ತವದ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ತಿಳಿಸಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಅವರದ್ದೇ ಆದ ಶಕ್ತಿಯಿದೆ. ಅವರು ಚಾಣಾಕ್ಷರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲೂ ದೇವೇಗೌಡರ ವಿರುದ್ಧ ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.