ಹುಳಿಯಾರು: ಉಪಲೋಕಾಯುಕ್ತ ಬಿ. ವೀರಪ್ಪ ಅವರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಹೆರಿಗೆ ವಿಭಾಗ, ಶವಾಗಾರ, ‘108’ ಆಂಬುಲೆನ್ಸ್ ಸೇವೆ, ಪುರುಷ ಮತ್ತು ಮಹಿಳೆಯರ ವಾರ್ಡ್‌ಗಳನ್ನು ಪರಿಶೀಲಿಸಿದರು.
ವೈದ್ಯಾಧಿಕಾರಿಗಳು ಸಂಜೆ ವೇಳೆ ಲಭ್ಯವಿಲ್ಲದಿರುವುದರ ಬಗ್ಗೆ ಸಾರ್ವಜನಿಕರು ದೂರು ನೀಡಿದರು. ಅಪಘಾತ ಸಂದರ್ಭದಲ್ಲಿ ವೈದ್ಯರ ಅಲಭ್ಯತೆಯಿಂದ ರೋಗಿಗಳಿಗೆ ಆಗುವ ತೊಂದರೆಗಳು ಮತ್ತು ಪರಿಣಾಮಗಳ ಬಗ್ಗೆ ಉಪಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಆಸ್ಪತ್ರೆಯ ಎಕ್ಸ್‌ರೆ ಘಟಕವು ದೂಳು ತುಂಬಿ, ಬಳಕೆಯಾಗದೆ ಇರುವುದನ್ನು ಕಂಡು ಕಿಡಿಕಾರಿದರು. ವೈದ್ಯಾಧಿಕಾರಿ ಡಾ.ಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡರು.
ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿದ ಉಪಲೋಕಾಯುಕ್ತರು, ಅಲ್ಲಿನ ಕಾರ್ಯವೈಖರಿ ಪರಿಶೀಲಿಸಿದರು. ಬಸ್ ನಿಲ್ದಾಣ ಮತ್ತು ನಾಡಕಚೇರಿಯ ಸಮಸ್ಯೆಗಳನ್ನು ಪಟ್ಟಿ ಮಾಡಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಲೋಕಾಯುಕ್ತ ಡಿವೈಎಸ್‌ಪಿ ಸಂತೋಷ್‌ಕುಮಾರ್, ಉಪವಿಭಾಗಾಧಿಕಾರಿ ಕೆ.ಸಪ್ತಶ್ರೀ, ತಹಶೀಲ್ದಾರ್ ಕೆ. ಪುರಂದರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.