ADVERTISEMENT

ಮಧುಗಿರಿ: 30 ಗ್ರಾ.ಪಂಗಳಲ್ಲಿ ಕಾಂಗ್ರೆಸ್‌ಗೆ ಅಧಿಕಾರ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 6:35 IST
Last Updated 8 ಜನವರಿ 2021, 6:35 IST
ರಾಜಣ್ಣ
ರಾಜಣ್ಣ   

ಮಧುಗಿರಿ: ‘ತಾಲ್ಲೂಕಿನ 525 ಗ್ರಾಮ ಪಂಚಾಯಿತಿ ಸದಸ್ಯರ ಪೈಕಿ 363 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ’ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 33 ಗ್ರಾಮ ಪಂಚಾಯಿತಿಗಳಲ್ಲಿ 30 ಪಂಚಾಯಿತಿಗಳು ಕಾಂಗ್ರೆಸ್ ವಶವಾಗಲಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಯಾವುದೇ ಯೋಜನೆಯೂ ಜನರಿಗೆ ತಲುಪಿಲ್ಲ ಸುಳ್ಳಿನ ಭರವಸೆ ನೀಡುವ ಮೂಲಕ ಜನರನ್ನು ವಂಚಿಸುತ್ತಿದೆ. ರಾಜ್ಯ ಸರ್ಕಾರ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ ನೀಡುತ್ತಿದೆ. ವಿರೋಧ ಪಕ್ಷದ ಶಾಸಕರಿಗೆ ಅನುದಾನ ಬಿಡುಗಡೆ ಮಾಡಲು ತಾರತಮ್ಯ ಮಾಡುತ್ತಿದೆ. ಇದರಿಂದ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಕುಂಠಿತವಾಗುತ್ತಿದೆ. ಈ ವಿಚಾರಗಳನ್ನು ಜನರ ಮುಂದಿಟ್ಟು ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.

ADVERTISEMENT

ಗೋಹತ್ಯೆ ನಿಷೇಧ ಕಾಯ್ದೆಯಿಂದ ಹಳ್ಳಿಗಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆಗೆದುಕೊಳ್ಳುವ ತೀರ್ಮಾನ ಜನಪರವಾಗಿಲ್ಲ. ಬಡ ಹಾಗೂ ಕೆಳವರ್ಗದ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಿಡಿಕಾರಿದರು.

ಚುನಾಯಿತ ಜನಪ್ರತಿನಿಧಿಗಳು ಅವಧಿಗೆ ಮುನ್ನವೇ ರಾಜೀನಾಮೆ ನೀಡಿದರೆ ಮುಂದೆ ನಡೆಯುವ ಉಪಚುನಾವಣೆ ಖರ್ಚು ವೆಚ್ಚಗಳನ್ನು ಅಭ್ಯರ್ಥಿಯೇ ಬರಿಸುವಂತಾಗಬೇಕು ಎಂದು ಚುನಾವಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಲಿ ಎಂದು ಒತ್ತಾಯಿಸಿದರು.

ಮಧುಗಿರಿ ಜಿಲ್ಲಾ ಕೇಂದ್ರವನ್ನಾಗಿಸಲು ಸಂಪೂರ್ಣ ಸಹಕಾರ ನೀಡಲಾಗುವುದು. ಈ ವಿಚಾರವಾಗಿ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಹಾಗೂ ಸೋತ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಬೃಹತ್ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ರಾಜ್ಯ ಸಹಕಾರ ಮಹಾಮಂಡಳಿ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ತಾ.ಪಂ. ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಪುರಸಭೆ ಅಧ್ಯಕ್ಷ ತಿಮ್ಮರಾಜು, ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ಲಾಲಾಪೇಟೆ ಮಂಜುನಾಥ್, ಮಂಜುನಾಥ್ ಆಚಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್ ಬಾಬು, ಗ್ರಾ.ಪಂ ಮಾಜಿ ಅಧ್ಯಕ್ಷ ವಿ.ಆರ್.ಭಾಸ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಗೋಪಾಲ್, ಎಂ.ಎಸ್.ಮಲ್ಲಿಕಾರ್ಜುನಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.