ADVERTISEMENT

ಎಸ್‌.ಸಿಗೆ ಸೇರಿಸಲು ಮಡಿವಾಳರ ಆಗ್ರಹ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಗೆ ಮಡಿವಾಳರು ಕಿಡಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 16:33 IST
Last Updated 26 ಸೆಪ್ಟೆಂಬರ್ 2022, 16:33 IST
ಲಕ್ಷ್ಮಣ್‌
ಲಕ್ಷ್ಮಣ್‌   

ತುಮಕೂರು: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬ ಸಚಿವ ಕೋಟಶ್ರೀನಿವಾಸಪೂಜಾರಿ ಹೇಳಿಕೆಗೆ ಮಡಿವಾಳರು ಇಲ್ಲಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.

ಸೆ. 22ರಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ ಅವರ ಪ್ರಶ್ನೆಗೆಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸಪೂಜಾರಿ ಅವರು ಮಡಿವಾಳರ ಬಗ್ಗೆ ಯಾವುದೇ ಅರಿವಿಲ್ಲದೆ ಮಾತನಾಡಿದ್ದಾರೆ ಎಂದು ಮಡಿವಾಳರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್‌ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಪ್ರೊ.ಅನ್ನಪೂರ್ಣಮ್ಮ ವರದಿಯನ್ನು ಸದನಕ್ಕೆ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ ಕೈಗೊಂಡಿಲ್ಲ ಎಂದು ಹೇಳುವ ಮೂಲಕ ಸರ್ಕಾರ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.

ADVERTISEMENT

ಪರಿಶಿಷ್ಟ ಜಾತಿ, ಪಂಗಡದವರಿಗಿಂತ ಹೀನಾಯ ಸ್ಥಿತಿಯಲ್ಲಿ ಮಡಿವಾಳ ಸಮುದಾಯದ ಜನರು ಬದುಕುತ್ತಿದ್ದಾರೆ. ಆದರೆ, ಸರ್ಕಾರ ಸಮುದಾಯದವನ್ನು‌ ನಿರ್ಲಕ್ಷ್ಯ ಮಾಡುತ್ತಿದೆ. ಕನಿಷ್ಠ ಸೌಲಭ್ಯ ಕಲ್ಪಿಸಲು ಆಗಿಲ್ಲ. ಹಲವು ವರ್ಷಗಳ ಬೇಡಿಕೆ ಈಡೇರಿಕೆಗೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಇದೇ 28ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವ ಪಕ್ಷ ಸಭೆಯಲ್ಲಿ ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಬಗ್ಗೆ ಚರ್ಚಿಸಬೇಕು. ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಸಚಿವ ಕೋಟಶ್ರೀನಿವಾಸ ಪೂಜಾರಿ ಮನೆಯ ಮುಂದೆ ಧರಣಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಡಿವಾಳರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಕೆಂಪನರಸಯ್ಯ, ಮುಖಂಡರಾದ ಜಿ. ವೆಂಕಟರಾಮಯ್ಯ, ಶಾಂತಕುಮಾರ್‌, ಯದುಕುಮಾರ್‌, ಗೋವಿಂದರಾಜು, ರಂಗಸ್ವಾಮಯ್ಯ, ಅಂಬಿಕಾ, ಮಂಜುಳಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.