ADVERTISEMENT

ನಿಮ್ಮ ಮನೆ ಸುತ್ತ ಸ್ವಚ್ಛತೆ ಕಾಪಾಡಿ

ಡೆಂಗಿ ದಿನಾಚರಣೆ: ಜಾಗೃತಿ ಜಾಥಾದಲ್ಲಿ ಶುಭಾ ಕಲ್ಯಾಣ್ ಮನವಿ

​ಪ್ರಜಾವಾಣಿ ವಾರ್ತೆ
Published 19 ಮೇ 2019, 11:10 IST
Last Updated 19 ಮೇ 2019, 11:10 IST
ಡೆಂಗಿ ಜಾಗೃತಿ ಜಾಥಾಕ್ಕೆ ಸಿಇಓ ಶುಭಾ ಕಲ್ಯಾಣ್ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಟಿ.ಭೂಬಾಲನ್ ಇದ್ದರು
ಡೆಂಗಿ ಜಾಗೃತಿ ಜಾಥಾಕ್ಕೆ ಸಿಇಓ ಶುಭಾ ಕಲ್ಯಾಣ್ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಟಿ.ಭೂಬಾಲನ್ ಇದ್ದರು   

ತುಮಕೂರು: ‘ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿದರೆ ಮಾತ್ರ ರೋಗ ನಿಯಂತ್ರಣ ಮಾಡಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ ಹಾಗೂ ನರ್ಸಿಂಗ್ ಕಾಲೇಜುಗಳ ಆಶ್ರಯದಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ನಡೆದ ರಾಷ್ಟ್ರೀಯ ಡೆಂಗಿ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

‘ಮನೆಯಲ್ಲಿ ಅನಗತ್ಯ ನೀರಿನ ಶೇಖರಣೆಯನ್ನು ತಪ್ಪಿಸಿ, ಮನೆಯ ಸುತ್ತಮುತ್ತ ಮಳೆ ನೀರು ನಿಲ್ಲದಂತೆ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು. ಬೇಸಿಗೆ ಕಾಲದಲ್ಲಿ ಸಾಮಾನ್ಯವಾಗಿ ಹೆಚ್ಚಾಗಿ ನೀರು ಸಂಗ್ರಹ ಮಾಡಲಾಗುತ್ತದೆ. ಆದರೆ, ಒಂದು ವಾರಕ್ಕಿಂತ ಹೆಚ್ಚು ನೀರನ್ನು ಸಂಗ್ರಹಿಸಬಾರದು. ಈಗಾಗಲೇ ಆಶಾ ಕಾರ್ಯಕರ್ತೆಯರು ನೀರು ಸಂಗ್ರಹವಾಗಿರುವ ತೊಟ್ಟಿಗಳಿಗೆ ಲಾರ್ವಾಹಾರಿಗಳನ್ನು ಬಿಡುವ ಮೂಲಕ ಡೆಂಗಿ ಜ್ವರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಟಿ.ಎನ್.ಪುರುಷೋತ್ತಮ್ ಮಾತನಾಡಿದರು.

ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್, ಡಾ.ಬಿ.ಆರ್. ಚಂದ್ರಿಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ ವೀರಭದ್ರಯ್ಯ, ಡಾ.ಎಸ್.ಶರತ್‌ಚಂದ್ರ, ಉಷಾ, ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.