ADVERTISEMENT

ವೈದ್ಯಕೀಯ ಕಾಲೇಜು: ಸಿ.ಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 3:55 IST
Last Updated 26 ಸೆಪ್ಟೆಂಬರ್ 2021, 3:55 IST
ತುಮಕೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶ್ರವಣ ದೋಷವುಳ್ಳ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು. ಶಾಸಕ ಜ್ಯೋತಿಗಣೇಶ್, ಮೇಯರ್ ಬಿ.ಜಿ.ಕೃಷ್ಣಪ್ಪ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಉಪಸ್ಥಿತರಿದ್ದರು
ತುಮಕೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶ್ರವಣ ದೋಷವುಳ್ಳ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು. ಶಾಸಕ ಜ್ಯೋತಿಗಣೇಶ್, ಮೇಯರ್ ಬಿ.ಜಿ.ಕೃಷ್ಣಪ್ಪ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಉಪಸ್ಥಿತರಿದ್ದರು   

ತುಮಕೂರು: ಜಿಲ್ಲಾ ಕೇಂದ್ರದಿಂದ ಹೊರಗೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲಾ ಕೇಂದ್ರದಲ್ಲಿ ಈಗಾಗಲೇ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಈಗ ಮತ್ತೊಂದು ಕಾಲೇಜು ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ಹಾಗಾಗಿ ಜಿಲ್ಲಾ ಕೇಂದ್ರದಿಂದ ಹೊರಗೆ ತೆರೆಯಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಕ್ಯಾನ್ಸರ್ ಆಸ್ಪತ್ರೆ, ತಾಯಿ ಹಾಗೂ ಮಕ್ಕಳ ಆಸ್ಪತ್ರೆ, ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ‘ತುಮಕೂರಿನಲ್ಲಿ ಜಯದೇವ ಹೃದ್ರೋ
ಗ ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗುವುದು. ಈ ಕೇಂದ್ರಕ್ಕೆ ಬೇಕಾದ ಜಾಗ ಗುರುತಿಸಿದರೆ ಅಗತ್ಯ ಹಣಕಾಸಿನ ನೆರವು ನೀಡಲಾಗುವುದು’ ಎಂದರು.

ADVERTISEMENT

ತಾಯಿ ಹಾಗೂ ಮಗುವಿನ ಸಾವಿನ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಒತ್ತು ನೀಡಲಿದೆ. ಮಹಿಳೆ, ಮಕ್ಕಳ ಅಪೌಷ್ಟಿಕತೆ ನೀಗಿಸಲು ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಕೋವಿಡ್ ಮೂರನೇ ಅಲೆ ಎದುರಾದರೆ ಆಮ್ಲಜನಕ, ಹಾಸಿಗೆ ಕೊರತೆ ಆಗದಂತೆ ನೋಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಕೋವಿಡ್–19 ಬಂದಿದ್ದರಿಂದಾಗಿ ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಯಿತು. ಕಳೆದ ಒಂದು ವರ್ಷದಲ್ಲಿ 24 ಸಾವಿರ ಹಾಸಿಗೆ, 5 ಸಾವಿರ ಐಸಿಯು ಹಾಸಿಗೆ ನಿರ್ಮಾಣ ಮಾಡಲಾಗಿದೆ. ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದ ಸಿಬ್ಬಂದಿ ಸೇರಿದಂತೆ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆದರೆ ಇಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ತಪ್ಪು ಹುಡುಕಬಾರದು. ಜನರ ಜೀವನ ಉಳಿಸುವ ಸಮಯದಲ್ಲಿ ಟೀಕಿಸುವವರು ಸೂಕ್ಷ್ಮವಾಗಿ ಇರಬೇಕು. ಸಾರ್ವಜನಿಕ ಜೀವನದಲ್ಲಿ ಇರುವವರು ಸಾಕಷ್ಟು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ವಿರೋಧ ಪಕ್ಷಗಳನ್ನು ಪರೋಕ್ಷವಾಗಿ ಕುಟುಕಿದರು.

ಹೆಚ್ಚಿದ ಕ್ಯಾನ್ಸರ್: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ಆತಂಕ ತರಿಸಿದೆ. ಆದರೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಚಿಕಿತ್ಸೆ ನೀಡುತ್ತಿರುವುದರಿಂದ ಹಲವು ಮಾದರಿಯ ಕ್ಯಾನ್ಸರ್ ಗುಣಪಡಿಸಲಾಗುತ್ತಿದೆ. ಮುಂದಿನ 2030ರ ವೇಳೆಗೆ ಮಹಿಳೆ ಹಾಗೂ ಮಕ್ಕಳ ಸಾವಿನ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ತುಮಕೂರು ನಗರ ಶೈಕ್ಷಣಿಕ, ವಾಣಿಜ್ಯ ದೃಷ್ಟಿಯಿಂದ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ‘ಸ್ಯಾಟಲೈಟ್’ ನಗರವಾಗುವ ಎಲ್ಲಾ ಅರ್ಹತೆ ಪಡೆದುಕೊಂಡಿದೆ. ತುಮಕೂರಿನಲ್ಲೂ ಹೆಚ್ಚು ಅಭಿವೃದ್ಧಿ ಚಟುವಟಿಕೆಗಳು ನಡೆದರೆ ಬೆಂಗಳೂರಿನ ಮೇಲೂ ಎಲ್ಲಾ ರೀತಿಯಲ್ಲೂ ಒತ್ತಡಗಳು ಕಡಿಮೆಯಾಗಲಿವೆ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯಗಳು ಇಲ್ಲೂ ಸಿಗುವಂತಾಗಬೇಕು ಎಂದು ಹೇಳಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಚಿದಾನಂದ ಎಂ.ಗೌಡ, ಡಾ.ಸಿ.ಎಂ.ರಾಜೇಶ್‌ಗೌಡ, ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ, ಮುಖಂಡರಾದ ಎಸ್.ಆರ್.ಗೌಡ, ಕಿರಣ್‌ಕುಮಾರ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.