ADVERTISEMENT

ಎಚ್‌ಐವಿ ಸೋಂಕಿತರಿಗೆ ₹37.20 ಲಕ್ಷ ನೆರವು

155 ಪೋಕ್ಸೊ ಪ್ರಕರಣಗಳು ಬಾಕಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2023, 13:40 IST
Last Updated 1 ಆಗಸ್ಟ್ 2023, 13:40 IST
ಎಚ್‌ಐವಿ
ಎಚ್‌ಐವಿ   

ತುಮಕೂರು: ಕಳೆದ ಸಾಲಿನಲ್ಲಿ ವಿಶೇಷ ಪಾಲನಾ ಯೋಜನೆಯಡಿ ಎಚ್‍ಐವಿ ಸೋಂಕಿತ, ಬಾಧಿತ ಮಕ್ಕಳಿಗೆ ಮಾಸಿಕ ತಲಾ ₹1 ಸಾವಿರದಂತೆ ಒಟ್ಟು ₹37.20 ಲಕ್ಷ ಹಣವನ್ನು ಮಕ್ಕಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿ ನಂತರ ಕುಟುಂಬಕ್ಕೆ ಸೇರ್ಪಡೆಯಾದ ಮಕ್ಕಳು, ಮಕ್ಕಳ ಪೋಷಕರು ಜೈಲಿನಲ್ಲಿದ್ದರೆ, ಅನಾಥ ಮಕ್ಕಳು, ಏಕ ಪೋಷಕ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ 2022-23ನೇ ಸಾಲಿನಿಂದ ಆದ್ಯತೆ ಮೇರೆಗೆ ಮಾಸಿಕ ₹4 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಮಕ್ಕಳ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಪ್ರಸಕ್ತ ಸಾಲಿನಲ್ಲಿ ವಿಶೇಷ ಪಾಲನಾ ಯೋಜನೆಯಡಿ ಹೊಸದಾಗಿ 45 ಹಾಗೂ ಪ್ರಾಯೋಜಕತ್ವ ಕಾರ್ಯಕ್ರಮದಡಿ 266 ಮಕ್ಕಳನ್ನು ಗುರುತಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಕಳೆದ ಸಾಲಿನಲ್ಲಿ 274 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 119 ಪ್ರಕರಣಗಳು ಇತ್ಯರ್ಥಗೊಂಡಿದ್ದು, 155 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು.

ಬಾಲ ನ್ಯಾಯ ಮಂಡಳಿಯಲ್ಲಿ ಈ ವರ್ಷದ ಜನವರಿಯಿಂದ ಜೂನ್‌ ವರೆಗೆ 17 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಪ್ರಸಕ್ತ ಸಾಲಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ 23 ಪ್ರಕರಣಗಳು ವರದಿಯಾಗಿವೆ. ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಬಳಕೆ ನಿಷೇಧಿಸಿ ಸುತ್ತೋಲೆ ಹೊರಡಿಸಬೇಕು. ಶಾಲಾ ಆವರಣ, ವಸತಿ ನಿಲಯಗಳ ಹತ್ತಿರ ಜಾಮರ್‌ ಅಳವಡಿಸಬೇಕು ಎಂದು ಡಿಡಿಪಿಐ ಸಿ.ನಂಜಯ್ಯ ಅವರಿಗೆ ಸೂಚಿಸಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಕೆ.ಶಹಪೂರ್‌ವಾಡ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಸ್‌.ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನುಷಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪವಿತ್ರಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.