ತುಮಕೂರು: ಮಹಾನಗರ ಪಾಲಿಕೆ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿದಿದ್ದಾರೆ.
ಪಾಲಿಕೆ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಮುಷ್ಕರ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ನಗರದಲ್ಲೂ ಬುಧವಾರ ಮುಷ್ಕರ ಆರಂಭಿಸಲಿದ್ದಾರೆ.
ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ. ಈಗ ಅನಿವಾರ್ಯವಾಗಿ ಮುಷ್ಕರಕ್ಕೆ ಇಳಿದಿದ್ದೇವೆ ಎಂದು ಪ್ರತಿಭಟನಕಾರರು ತಿಳಿಸಿದರು.
ಪಾಲಿಕೆ ನೌಕರರಿಗೆ ಆರ್ಥಿಕ ಇಲಾಖೆಯಿಂದಲೇ ವೇತನ ಅನುದಾನ ಬಿಡುಗಡೆ ಮಾಡಬೇಕು, ವೃಂದ ಹಾಗೂ ನೇಮಕಾತಿ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪಾಲಿಕೆ ನೌಕರರಿಗೂ ವಿಸ್ತರಿಸಬೇಕು. ಈಗಿರುವ ಮರುಪಾವತಿ ಯೋಜನೆಯಲ್ಲಿ ಆರೋಗ್ಯದ ಸಲುವಾಗಿ ಖರ್ಚು ಮಾಡಿದ ಹಣದಲ್ಲಿ ಶೇ 35ರಷ್ಟು ಮರುಪಾವತಿ ಮಾಡಲಾಗುತ್ತಿದೆ. ಇದರಿಂದ ನೆರವಾಗುತ್ತಿಲ್ಲ. ಅದೇ ರೀತಿ ಕೆಜಿಐಡಿ, ಜಿಪಿಎಫ್ ಸೌಲಭ್ಯ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಮುಷ್ಕರದ ಸ್ಥಳಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಭೇಟಿನೀಡಿ ಅಹವಾಲು ಆಲಿಸಿದರು. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಸಂಘದ ಪ್ರಮುಖರಾದ ಶಬ್ಬೀರ್ ಅಹಮದ್, ಪುಷ್ಪಲತಾ, ಸಿದ್ಧಲಿಂಗಪ್ಪ, ಮಧು, ವಿಶ್ವನಾಥ್, ಶೇಖರಬಾಬು, ಮಹೇಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.